ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆ ಖಚಿತ; ಬೇಸಿಗೆ ರಜೆ ಇಲ್ಲ: ಸಚಿವ ಡಾ.ಸಿ.ಎನ್.‌ ಅಶ್ವತ್ಥನಾರಾಯಣ

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬದಲಾವಣೆ ಇಲ್ಲ
Last Updated 10 ಏಪ್ರಿಲ್ 2021, 9:58 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆ ಸ್ಥಗಿತಗೊಳಿಸುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ನಡೆಯಲಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌, ಡಿಪ್ಲೊಮಾ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಎಲ್ಲ ವಿಭಾಗಗಳ ಪರೀಕ್ಷೆಗಳು ಯಥಾವತ್‌ ನಡೆಯಲಿದೆ’ ಎಂದರು.

‘ಮುಂದಿನ ವರ್ಷ, ಅಂದರೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಯಲ್ಲೂ ವ್ಯತ್ಯಯ ಇಲ್ಲ. ಪರೀಕ್ಷೆಗಳು ಮುಗಿದ ಮುಗಿದ ಬೆನ್ನಿಗೆ ತರಗತಿ ಆರಂಭವಾಗುತ್ತವೆ. ಬೇಸಿಗೆ ರಜೆ ಇರುವುದಿಲ್ಲ. ಆಫ್‌ಲೈನ್‌ ಮತ್ತು ಆನ್‌ಲೈನ್‌ ತರಗತಿ ಇರುತ್ತವೆ. ಮೊದಲು ಆನ್‌ಲೈನ್‌ ತರಗತಿಗಳು ಆರಂಭವಾಗುತ್ತವೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕು’ ಎಂದರು.

‘ಯಾರು ಕಾಲೇಜಿಗೆ ಬರುತ್ತಾರೋ ಅವರಿಗೆ ಕೋವಿಡ್‌ ಮಾರ್ಗಸೂಚಿ ಪ್ರಕಾರ ಸುರಕ್ಷತಾ ಕ್ರಮಗಳನ್ನು ಕಾಲೇಜಿನಲ್ಲಿ ಕೈಗೊಳ್ಳಲಾಗುವುದು. ತರಗತಿ ಕೊಠಡಿಗಳ ಸ್ಯಾನಿಟೈಸೇಷನ್‌, ಸ್ವಚ್ಛತೆ, ಕೋವಿಡ್‌ ಪರೀಕ್ಷೆ, ದೈಹಿಕ ಅಂತರ ಹಾಗೂ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿರುತ್ತದೆ’ ಎಂದು ಅವರು ಹೇಳಿದರು.

ಉಚಿತ ಟ್ಯಾಬ್‌: ‘ಕೋವಿಡ್‌ ಕಾರಣಕ್ಕಾಗಿ ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಎಸ್)‌ ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಕಲಿಯಬಹುದು. ಅದಕ್ಕೆ ನೆರವಾಗುವಂತೆ ಈ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್‌ಲೆಟ್‌ ಪಿಸಿ ನೀಡಲಾಗಿದೆ. ಕಳೆದ ವರ್ಷ 1.10 ಲಕ್ಷ ವಿದ್ಯಾರ್ಥಿಗಳಿಗೆ ಕೊಡಲಾಗಿತ್ತು. ಕ್ಲಾಸ್‌ ರೂಮುಗಳನ್ನೇ ಸ್ಟುಡಿಯೋಗಳ್ನಾಗಿ ಪರಿವರ್ತಿಸಲಾಗಿದೆ. ಎಲ್ಲವೂ ಸ್ಮಾರ್ಟ್‌ ಕ್ಲಾಸ್‌ಗಳಾಗಿವೆ. ಮನೆಯಿಂದಲೇ ವ್ಯಾಸಂಗ ಮುಂದುವರಿಸಬಹುದು’ ಎಂದು ಅವರು ಮಾಹಿತಿ ನೀಡಿದರು.

‘ಈಗಾಗಲೇ ಮುಂದಿನ ಶೈಕ್ಷಣಿಕ ವರ್ಷದ ನಾಲ್ಕೈದು ತಿಂಗಳು ನಷ್ಟವಾಗಿದೆ. ಇನ್ನೂ ತಡ ಆಗುವುದು ಬೇಡ. ಒಂದೊಮ್ಮೆ ತಡವಾದರೆ, ಓದು, ಪರೀಕ್ಷೆ, ತೇರ್ಗಡೆ, ಉದ್ಯೋಗ, ಮುಂದಿನ ವ್ಯಾಸಂಗದ ಸರಪಳಿ ಕಟ್‌ ಆಗಿಲಿದೆ’ ಎಂದರು.

ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯಲ್ಲಿ ಸರಿಯಾಗಿ ಕಂಟೆಂಟ್‌ ಅಪ್‌ಲೋಡ್‌ ಮಾಡಲಾಗುತ್ತಿಲ್ಲ ಎಂಬ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ‘ತಕ್ಷಣ ಅದನ್ನು ಸರಿ ಮಾಡುತ್ತೇವೆ. ಈ ಬಗ್ಗೆ ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ. ಇಡೀ ದೇಶದಲ್ಲೇ ಇಂಥ ಕಲಿಕಾ ವ್ಯವಸ್ಥೆಯನ್ನು ರಾಜ್ಯದಲ್ಲಿ ಮೊದಲಿಗೆ ಜಾರಿಗೆ ತರಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT