ಶುಕ್ರವಾರ, ಅಕ್ಟೋಬರ್ 23, 2020
25 °C
ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ

ರೈತರಿಂದ ನಾಳೆ ರಾಜ್ಯ ಬಂದ್‌ಗೆ ಕರೆ: ಬಸ್‌ ಸಂಚಾರಕ್ಕಿಲ್ಲ ಅಡಚಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ರೈತ ಸಂಘಟನೆಗಳು ಸೋಮವಾರ (ಸೆ. 28) ಬಂದ್‌ಗೆ ಕರೆ ನೀಡಿದ್ದರೂ, ರಾಜ್ಯದಾದ್ಯಂತ ಎಂದಿನಂತೆ ಸಾರಿಗೆ ಸಂಚಾರ ವ್ಯವಸ್ಥೆ ಇರಲಿದೆ’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಬಸ್ ಸಂಚಾರ ಎಂದಿನಂತೆ ಮುಂದುವರೆಯಲಿದೆ. ಬಸ್‌ಗಳ ಸುಗಮ ಸಂಚಾರಕ್ಕೆ ಅಗತ್ಯವಾದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರಲ್ಲಿ ಈ ಬಗ್ಗೆ ಯಾವುದೇ ಆತಂಕ ಬೇಡ’ ಎಂದು ಅವರು ತಿಳಿಸಿದ್ದಾರೆ.

‘ಬಂದ್‌ಗೆ ಕರೆ ಕೊಟ್ಟಿರುವುದರಿಂದ ಬಸ್ಸುಗಳಿಗೆ ಮತ್ತು ಇತರ ಸರ್ಕಾರಿ ಆಸ್ತಿ ಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಸುರಕ್ಷತಾ ವ್ಯವಸ್ಥೆ ಒದಗಿಸುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಅಲ್ಲದೆ, ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟು ಮಾಡಲು ಯಾರೇ ಯತ್ನಿಸಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ’ ಎಂದೂ ಸವದಿ ಎಚ್ಚರಿಕೆ ನೀಡಿದ್ದಾರೆ.

‘ರಾಜ್ಯ ಸರ್ಕಾರ ರೈತರ ಹಿತಾಸಕ್ತಿಗೆ ಪೂರಕವಾಗಿಯೇ ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಗಳನ್ನು ಮಂಡಿಸಿದೆ. ಈ ಬಗ್ಗೆ ಪ್ರತಿಭಟನಾ ನಿರತರ ಮನವೊಲಿಸಲು ಮುಖ್ಯಮಂತ್ರಿ ಸಭೆ ನಡೆಸಿದ್ದರು. ಈ ಮಸೂದೆಗಳಿಂದ ರೈತರಿಗೆ ಉಂಟಾಗಲಿರುವ ಲಾಭಗಳ ಬಗ್ಗೆ ವಿಧಾನಮಂಡಲದ ಕಲಾಪದಲ್ಲಿಯೂ ಸರ್ಕಾರ ಸ್ಪಷ್ಟನೆ ನೀಡಿದೆ. ಆದರೂ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ರೀತಿಯಲ್ಲಿ ಬಂದ್ ನಡೆಸಲು ನಿರ್ಧರಿಸಿರುವುದು ದುರ್ದೈವದ ಸಂಗತಿ’ ಎಂದಿದ್ದಾರೆ.

‘ಕೊರೊನಾ ರೋಗದ ಆತಂಕದಲ್ಲಿ ರಾಜ್ಯದ ಜನರು ಪರಿತಪಿಸುತ್ತಿರುವ ಈ ಸಂದರ್ಭದಲ್ಲಿ ಇಂಥ ಪ್ರತಿಭಟನೆ, ಬಂದ್‌ಗಳನ್ನು ನಡೆಸುವುದು ಸರಿಯಲ್ಲ. ಬಂದ್ ನಡೆಸುವ ನಿರ್ಧಾರವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಕೈಬಿಟ್ಟು ಸಹಕರಿಸಬೇಕು’ ಎಂದು ಬಂದ್‌ಗೆ ಕರೆಕೊಟ್ಟಿರುವ ಸಂಘಟನೆಗಳಲ್ಲಿ ಸವದಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು