ಮಾತುಕತೆಯ ಭರವಸೆ: ರೈತರ ಪ್ರತಿಭಟನೆ ಸ್ಥಗಿತ
ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ನಿಯಂತ್ರಣ (ಎಪಿಎಂಸಿ) ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಭೂ ಕಂದಾಯ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿ ರದ್ದುಗೊಳಿಸಲು ಆಗ್ರಹಿಸಿ ಸೋಮವಾರ ಪ್ರತಿಭಟನೆ ಆರಂಭಿಸಿದ್ದ ರೈತ ಸಂಘದ ಕಾರ್ಯಕರ್ತರು, ಮುಖ್ಯಮಂತ್ರಿ ಜತೆ ಮಾತುಕತೆಗೆ ಅವಕಾಶ ಕಲ್ಪಿಸುವ ಭರವಸೆ ಆಧರಿಸಿ ಹೋರಾಟ ಕೈಬಿಟ್ಟಿದ್ದಾರೆ.
ವಿಧಾನ ಮಂಡಲದ ಹಿಂದಿನ ಅಧಿವೇಶನದಲ್ಲಿ ಮೂರೂ ಕಾಯ್ದೆಗಳಿಗೆ ಕೆಲವು ತಿದ್ದುಪಡಿಗಳನ್ನು ಅಂಗೀಕರಿಸಲಾಗಿತ್ತು. ಅವುಗಳನ್ನು ಹಿಂದಕ್ಕೆ ಪಡೆಯುವಂತೆ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ ವಿಧಾನಸೌಧ ಮುತ್ತಿಗೆ ಹಮ್ಮಿಕೊಂಡಿತ್ತು. ಎಚ್.ಆರ್. ಬಸವರಾಜಪ್ಪ ಸೇರಿದಂತೆ ಹಲವು ಮಂದಿ ರೈತ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಆರಂಭಿಸಿದ್ದ ರೈತರು ಆನಂದರಾವ್ ವೃತ್ತದ ಮಾರ್ಗವಾಗಿ ಸ್ವಾತಂತ್ರ್ಯ ಉದ್ಯಾನ ತಲುಪುತ್ತಿದ್ದಂತೆಯೇ ಪೊಲೀಸರು ತಡೆದರು. ಬ್ಯಾರಿಕೇಡ್ ಅಳವಡಿಸಿ ಶೇಷಾದ್ರಿ ರಸ್ತೆಯನ್ನು ಮುಚ್ಚಿ ರೈತರು ವಿಧಾನಸೌಧದತ್ತ ತೆರಳದಂತೆ ಮಾಡಿದರು.
ರೈತರು ಮತ್ತು ಪೊಲೀಸರ ನಡುವೆ ಕೆಲಕಾಲ ತಳ್ಳಾಟ, ನೂಕಾಟ ನಡೆದವು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ರೈತರು, ಕೃಷಿ ಹಾಗೂ ಭೂ ಒಡೆತನಕ್ಕೆ ಸಂಬಂಧಿಸಿದ ಕಾಯ್ದೆಗಳ ತಿದ್ದುಪಡಿ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರು.
ಮಧ್ಯಾಹ್ನ 2.30ಕ್ಕೆ ಪ್ರತಿಭಟನಾ ಸ್ಥಳಕ್ಕೆ ಬಂದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಮ್ಮೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ. ಈ ಭರವಸೆಯ ಆಧಾರದಲ್ಲಿ ಪ್ರತಿಭಟನೆ ಹಿಂಪಡೆಯಬೇಕು’ ಎಂದು ಮನವಿ ಮಾಡಿದರು.
ಬಳಿಕ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ‘ಮಾತುಕತೆಯ ಭರವಸೆಯ ಆಧಾರದಲ್ಲಿ ತಾತ್ಕಾಲಿಕವಾಗಿ ಹೋರಾಟ ಸ್ಥಗಿತಗೊಳಿಸುತ್ತಿದ್ದೇವೆ. ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟಕ್ಕೆ ಸಿದ್ಧ’ ಎಂದು ಪ್ರಕಟಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.