ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಣಾ ಪಡೆಗಳಲ್ಲಿ ಹೆಚ್ಚಿದ ಸ್ತ್ರೀಶಕ್ತಿ: ರಾಷ್ಟ್ರಪತಿ ಮೆಚ್ಚುಗೆ

Last Updated 13 ಜೂನ್ 2022, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ರಕ್ಷಣಾ ಪಡೆಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವುದು ಸಂತಸದ ಸಂಗತಿ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭವನ್ನು ಸೋಮವಾರ ಉದ್ಘಾಟಿಸಿದ ಅವರು, ‘ಯುದ್ಧದ ಸನ್ನಿವೇಶಗಳು ಸೇರಿದಂತೆ ರಕ್ಷಣೆಗೆ ಸಂಬಂಧಿಸಿದ ಎಲ್ಲ ವಲಯಗಳಲ್ಲೂ ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಿದ್ದಾರೆ’ ಎಂದರು.

‘ದೇಶದಾದ್ಯಂತ ಇರುವ ರಾಷ್ಟ್ರೀಯ ಮಿಲಿಟರಿ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಲಕಿಯರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಜತೆಗೆ, ಈ ವರ್ಷದ ಆರಂಭದಿಂದ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿಯೂ(ಎನ್‌ಡಿಎ) ಬಾಲಕಿಯರಿಗೆ ಮುಕ್ತಗೊಳಿಸಿರುವುದು ಶ್ಲಾಘನೀಯ’ ಎಂದರು.

ಆರ್ಮಿ ಏವಿಯೇಷನ್‌ ಕೋರ್‌ ಸೇರಿದ ಮೊದಲ ಮಹಿಳಾ ಅಧಿಕಾರಿ ಕ್ಯಾಪ್ಟನ್‌ ಅಭಿಲಾಷ್‌ ಬರಾಕ್‌ ಅವರ ಸಾಧನೆಯನ್ನು ಪ್ರಸ್ತಾಪಿಸಿದ ಅವರು, ‘ಪ್ರತಿಷ್ಠಿತ ರಾಷ್ಟ್ರೀಯ ಮಿಲಿಟರಿ ಶಾಲೆ ಸೇರುವ ಬಾಲಕಿಯರು ಸಹ ಇದೇ ರೀತಿ ರಾಷ್ಟ್ರ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ’ ಎಂದು ಆಶಯ ವ್ಯಕ್ತಪಡಿಸಿದರು.

’ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯು ಶ್ರೀಮಂತ ಇತಿಹಾಸ ಮತ್ತು ಪರಂಪರೆ ಹೊಂದಿದೆ. ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಈ ಶಾಲೆಯ ಕ್ಯಾಪ್ಟನ್‌ ಗುರಬಚನ್‌ ಸಿಂಗ್‌ ಸಲರಿಯಾ ಅವರು ಮರಣೋತ್ತರವಾಗಿ ಪರಮವೀರ ಚಕ್ರ ಪಡೆದಿರುವುದು ಹೆಮ್ಮೆಯ ವಿಷಯ. ಕಾಂಗೊದಲ್ಲಿ ವಿಶ್ವಸಂಸ್ಥೆ ನಡೆಸಿದ ಕಾರ್ಯಾಚರಣೆಯಲ್ಲಿ ಅವರು ಹುತಾತ್ಮರಾಗಿದ್ದರು’ ಎಂದು ರಾಷ್ಟ್ರಪತಿ ಸ್ಮರಿಸಿದರು.

ವಿಶೇಷ ಲಕೋಟೆಯನ್ನು ರಾಷ್ಟ್ರಪತಿ ಅವರು ಬಿಡುಗಡೆಗೊಳಿಸಿದರು. ಸ್ಮರಣ ಸಂಚಿಕೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಬಿಡುಗಡೆ ಮಾಡಿದರು. ರಾಷ್ಟ್ರಪತಿ ಅವರ ಪತ್ನಿ ಸವಿತಾ ಕೋವಿಂದ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದ್ದರು.

ಶಾಲೆಯ ಇತಿಹಾಸ

1946ರ ಆಗಸ್ಟ್‌ 1ರಂದು ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆ ಆರಂಭವಾಯಿತು. ಆರನೇ ಕಿಂಗ್‌ ಜಾರ್ಜ್‌ ಅವರು ಈ ಶಾಲೆ ಆರಂಭಿಸಿದ್ದರು.

ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ 23 ರಾಜ್ಯಗಳ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ದೇಶದಲ್ಲೇ ಅತ್ಯುತ್ತಮ ವಸತಿಯುತ ಶಾಲೆಗಳಲ್ಲಿ ಇದು ಒಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT