ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರಧಾನ್ಯ ಖರೀದಿ: ಬೆಂಬಲ ಬೆಲೆ ಬಾಕಿ; ₹ 250 ಕೋಟಿ ಬಿಡುಗಡೆಗೆ ಸಿಎಂ ಸೂಚನೆ

Last Updated 1 ಜೂನ್ 2021, 13:31 IST
ಅಕ್ಷರ ಗಾತ್ರ

ಬೆಂಗಳೂರು: ‘ಕನಿಷ್ಠ ಬೆಂಬಲ ಬೆಲೆಯಲ್ಲಿ ಕಳೆದ ವರ್ಷ ದಾಖಲೆ ಪ್ರಮಾಣದಲ್ಲಿ ರೈತರಿಂದ ಆಹಾರಧಾನ್ಯ ಖರೀದಿಸಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ₹ 1067 ಕೋಟಿ ಪಾವತಿಗೆ ಬಾಕಿ ಇದೆ. ತಕ್ಷಣ ₹ 250 ಕೋಟಿ ಬಿಡುಗಡೆ ಮಾಡುವಂತೆ ಸೂಚಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಯ ಪೂರ್ವ ಸಿದ್ಧತೆ ಕುರಿತಂತೆ ಕೃಷಿ ಸಚಿವ ಬಿ.ಸಿ. ಪಾಟೀಲ ಮತ್ತು ಇಲಾಖೆಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಅವರು, ‘ಡಿಎಪಿ ಗೊಬ್ಬರ ಮತ್ತು ಯೂರಿಯ ಸಕಾಲದಲ್ಲಿ ಪೂರೈಸುವ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸಲಾಗುವುದು’ ಎಂದರು.

ಕೃಷಿ ಸಾಲ ಕಳೆದ ಸಾಲಿನ (2020-21) ಗುರಿಗಿಂತ ಈ ಬಾರಿ ಶೇ 16 ಹೆಚ್ಚು ವಿತರಣೆ ಉದ್ದೇಶಿಸಲಾಗಿದ್ದು, ₹ 3 ಸಾವಿರ ಕೋಟಿ ಹೆಚ್ಚುವರಿ ಗುರಿ ನಿಗದಪಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ₹ 21 ಸಾವಿರ ಕೋಟಿ ಸಾಲ ವಿತರಣೆ ಗುರಿ ನಿಗದಿಪಡಿಸಲಾಗಿದೆ.

‘ರಾಜ್ಯದಲ್ಲಿ ಈವರೆಗೆ ಉತ್ತಮ ಮಳೆಯಾಗಿದೆ. 20 ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಹಾಗೂ 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 6 ಅಥವಾ 7ರ ವೇಳೆಗೆ ಮುಂಗಾರು ಆರಂಭವಾಗಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ರಾಜ್ಯದಲ್ಲಿ 2020-21ರಲ್ಲಿ ದಾಖಲೆ ಪ್ರಮಾಣದ 153.08 ಲಕ್ಷ ಟನ್‌ ಆಹಾರ ಧಾನ್ಯ ಉತ್ಪಾದನೆ ಆಗಿದೆ. ಹಿಂದಿನ ವರ್ಷಕ್ಕಿಂತ ಶೇ 10ರಷ್ಟು ಹೆಚ್ಚಳವಾಗಿದೆ. ಈ ವರ್ಷ 135.48 ಲಕ್ಷ ಟನ್ ಗುರಿ ಹೊಂದಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಸಾಕಷ್ಟಿದೆ. ಡಿಎಪಿ ಪೂರೈಕೆಯ ಸಮಸ್ಯೆ ಬಗೆಹರಿಸಲಾಗಿದೆ. 690 ಕೃಷಿ ಯಂತ್ರ ಧಾರೆ ಕೇಂದ್ರಗಳು ಹಾಗೂ 210 ಗ್ರಾಮ ಮಟ್ಟದ ಕೃಷಿ ಯಂತ್ರೋಪಕರಣಗಳ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ಆಧಾರದಲ್ಲಿ ಕೃಷಿ ಯಂತ್ರೋಪಕರಣ ಒದಗಿಸಲಾಗುತ್ತಿದೆ’ ಎಂದು ಬಿ.ಸಿ. ಪಾಟೀಲ ತಿಳಿಸಿದರು.

‘ಕೋವಿಡ್ ಎರಡನೇ ಅಲೆಯ ಕಾರಣ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಘೋಷಿಸಿರುವ ಪರಿಹಾರ ವಿತರಣೆ ಈಗಾಗಲೇ ಆರಂಭವಾಗಿದೆ. ಈ ಉದ್ದೇಶಕ್ಕೆ ಬಿಡುಗಡೆಯಾಗಿರುವ ₹ 19 ಕೋಟಿಯಲ್ಲಿ ₹ 15.23 ಕೋಟಿಯನ್ನು 36,327 ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ’

ಪ್ರವಾಹ ಎದುರಿಸಲು ಸಿದ್ಧತೆ: ‘ಮಳೆಗಾಲದಲ್ಲಿ ಪ್ರವಾಹ ಎದುರಿಸಲು ಕೂಡಾ ಸಿದ್ಧತೆ ಮಾಡಲಾಗುತ್ತಿದ್ದು, ಪಂಚಾಯಿತಿ ಮಟ್ಟದ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು ಸಜ್ಜಾಗಿವೆ. ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ’ ಎಂದೂ ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ತೋಟಗಾರಿಕಾ ಸಚಿವ ಆರ್‌. ಶಂಕರ್, ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಕೂಡಾ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT