ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ: ಎಚ್‌ಡಿಕೆ

Last Updated 27 ಏಪ್ರಿಲ್ 2021, 7:07 IST
ಅಕ್ಷರ ಗಾತ್ರ

ಬೆಂಗಳೂರು:ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

'ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ...' ಜಿಂದಾಲ್‌ಗೆ 3,677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ'. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ ಅನ್ನು'ಈಸ್ಟ್‌ ಇಂಡಿಯಾ ಕಂಪನಿ' ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ?. ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ? ಎಂದು ದೂರಿದ್ದಾರೆ.

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ 'ಗೊತ್ತಿಲ್ಲ' ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ ಎಂದಿರುವ ಅವರು, ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT