ಸೋಮವಾರ, ಜೂನ್ 14, 2021
26 °C

ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕೈಗಾರಿಕಾ ಕಾಯ್ದೆಗಳಿಗೆ ಸುಗ್ರೀವಾಜ್ಞೆಗಳ ಮೂಲಕ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ಜನರಿಗೆ ಮಾರಕವಾಗಲಿದೆ. ಈ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪಕ್ಷದ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು.

ಜೆಡಿಎಸ್‌ ಕಚೇರಿಯಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜಿಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಜಿಲ್ಲಾ ಮುಖಂಡರ ಜೊತೆ ಸೋಮವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಅವರು ಮಾತನಾಡಿದರು.

‘ಹೋರಾಟದ ರೂಪುರೇಷೆಯ ಬಗ್ಗೆ ಪಕ್ಷದ ಮುಖಂಡರ ಜೊತೆ ಚರ್ಚಿಸಿದ್ದೇನೆ. ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ಬಳಿಕ ಆಯಾ ಜಿಲ್ಲಾಧಿಕಾರಿಗೆ ಮನವಿ ನೀಡುತ್ತೇವೆ. ನಂತರ ಮುಖ್ಯಮಂತ್ರಿಗೂ ಮನವಿ ಸಲ್ಲಿಸುತ್ತೇವೆ’ ಎಂದು ಅವರು ಹೇಳಿದರು.

‘ಡಿ.ಜೆ, ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆ ಕುರಿತು ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯ ನೇತೃತ್ವದಲ್ಲಿ ತನಿಖೆ ನಡೆಯಬೇಕು. ಈ ಘಟನೆಗೆ ಕಾರಣ ಏನು ಎನ್ನುವುದು ತನಿಖೆಯಿಂದ ಹೊರಬರಬೇಕು ಕಾಂಗ್ರೆಸ್ ಆಂತರಿಕ ವಿಚಾರದಿಂದ ಘಟನೆ ನಡೆದಿದಿಯಾ? ನನಗೆ ಗೊತ್ತಿಲ್ಲ. ಆ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ’ ಎಂದರು.

‘ಗಲಭೆ ಪ್ರಕರಣದಲ್ಲಿ 300ಕ್ಕಿಂತಲೂ ಹೆಚ್ಚು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದರೆ, ನಿರಪರಾಧಿಗಳಿಗೆ ತೊಂದರೆ ಆಗಬಾರದು. ಸರ್ಕಾರ ಈ ಬಗ್ಗೆ ಯೋಚನೆ ಮಾಡಬೇಕು’ ಎಂದರು.

‘ಗಲಭೆಯನ್ನು ಸರ್ಕಾರ ಮ್ಯಾಜಿಸ್ಟ್ರೀರಿಯಲ್‌ ತನಿಖೆಗೆ ವಹಿಸಿದೆ. ಆದರೆ, ಇದರಿಂದ ಸತ್ಯಾಂಶ ಹೊರಬರಲು ಸಾಧ್ಯ ಆಗುವುದಿಲ್ಲ. ಈ ಹಿಂದೆ ನಡೆದ ಹಲವು ಘಟನೆಗಳ ತನಿಖೆ ಏನಾಗಿದೆ ಎನ್ನುವುದು ನನಗೆ ಗೊತ್ತಿದೆ’ ಎಂದರು.

‘ಕೊರೊನಾ ಒಂದು ವೈರಸ್ ಅಷ್ಟೆ. ಅದಕ್ಕೆ ಜನರು ಭಯಪಡುವ ಅವಶ್ಯಕತೆ ಇಲ್ಲ. ಮುನ್ನೆಚ್ಚರಿಕೆ ವಹಿಸಿದರೆ ಸಾಕು. ಸೋಂಕಿತರನ್ನು ಪ್ರೀತಿಯಿಂದ ನೋಡಬೇಕು. ಅವರನ್ನು ಅವಮಾನಿಸಬಾರದು. ಸಾಧ್ಯವಾದಷ್ಟು ಜನರಿಗೆ ಪಕ್ಷದ ವತಿಯಿಂದ ಮಾಸ್ಕ್‌, ಸ್ಯಾನಿಟೈಸರ್ ಮತ್ತು ವಿಟಮಿನ್ ಮಾತ್ರೆಗಳನ್ನು ತಲುಪಿಸುವ ಕೆಲಸ ಆಗಬೇಕು’ ಎಂದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಅವರು ಮನವಿ ಮಾಡಿದರು.

ಜೆಪಿ ನಗರದಲ್ಲಿ ತಮ್ಮ ನಿವಾಸದಿಂದ ಜೆಡಿಎಸ್‌ ಶಾಸಕಾಂಗದ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಹಾಸನದಿಂದ ಸಂಸದ ಪ್ರಜ್ವಲ್ ರೇವಣ್ಣ ಕೂಡಾ ಸಂವಾದದಲ್ಲಿ ಭಾಗವಹಿಸಿದರು.‌ ಮೂವತ್ತು ಜಿಲ್ಲೆಗಳ ಜೆಡಿಎಸ್ ಮುಖಂಡರು ಕೂಡಾ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು