ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ವಕ್ಫ್‌ ಮಂಡಳಿ

ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ
Last Updated 29 ಆಗಸ್ಟ್ 2022, 9:52 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಬಯಸುವವರಿಗೆ ಅನುಮತಿ ನೀಡುವ ಸಂಪೂರ್ಣ ಅಧಿಕಾರವನ್ನು ಕರ್ನಾಟಕ ಸರ್ಕಾರಕ್ಕೆ ನೀಡಿರುವ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್‌ ಮಂಡಳಿಯು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಹಾಗೂ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್‌ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಎದುರು ಮಂಡಳಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ, ‘ಈ ವಿಚಾರವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಮನವಿ ಮಾಡಿದರು. ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಲು ಪೀಠವು ಸಮ್ಮತಿ ವ್ಯಕ್ತಪಡಿಸಿತು.

ಕಪಿಲ್‌ ಸಿಬಲ್‌, ‘ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅರ್ಜಿಗಳನ್ನು ಸರ್ಕಾರ ಪರಿಗಣಿಸಬಹುದು ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಈದ್ಗಾ ಮೈದಾನದಲ್ಲಿ ಆರು ದಶಕಗಳಿಂದ ಮುಸ್ಲಿಮರು ಪ್ರಾರ್ಥನೆ ಮಾಡುತ್ತಿದ್ದಾರೆ. ಒಂದು ವೇಳೆಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದರೆ ಧಾರ್ಮಿಕ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ’ ಎಂದು ಎಚ್ಚರಿಸಿದರು. ‘ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸದಿದ್ದರೆ ಅನಗತ್ಯ ಉದ್ವಿಗ್ನತೆ ಸೃಷ್ಟಿಯಾಗಲಿದೆ’ ಎಂದೂ ಹೇಳಿದರು.

'ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದೆ‘ ಎಂಬ ಸರ್ಕಾರದ ಆದೇಶವನ್ನು ಪ್ರಶ್ನಿಸಿ ವಕ್ಫ್‌ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮತ್ತು ಬೆಂಗಳೂರು ಜಿಲ್ಲೆ ವಕ್ಫ್‌ ಸಲಹಾ ಸಮಿತಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆ.25ರಂದು ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿತ್ತು.

‘ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ರಮ್ಜಾನ್ ಮತ್ತು ಬಕ್ರೀದ್ ದಿನದಂದು ಮೈದಾನದಲ್ಲಿ ಪಾರ್ಥನೆ ಸಲ್ಲಿಸಬಹುದು. ಈ ಎರಡು ದಿನಗಳನ್ನು ಹೊರತು ಪಡಿಸಿ ಬೇರಾವುದೇ ದಿನ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಬಿಬಿಎಂಪಿ ಮತ್ತು ಸರ್ಕಾರ ಮೈದಾನದಲ್ಲಿ ಗಣರಾಜೋತ್ಸವ ಮತ್ತು ಸ್ವಾತಂತ್ರ್ಯ ದಿನಾಚಣೆ ಆಚರಣೆಗೆ ಅನುಮತಿ ನೀಡಬಹುದು ಮತ್ತು ಮೈದಾನವನ್ನು ಆಟದ ಬಳಕೆಗೆ ಮಾತ್ರವೇ ಸೀಮಿತಗೊಳಿಸಬೇಕು’ ಎಂದು ಏಕಸದಸ್ಯ ನ್ಯಾಯಪೀಠ ನಿರ್ದೇಶಿಸಿತ್ತು.

ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಲಿಸಿದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಮತ್ತು ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಆಗಸ್ಟ್‌ 26ರಂದು ವಿಚಾರಣೆ ನಡೆಸಿತ್ತು.

‘ಏಕಸದಸ್ಯ ನ್ಯಾಯಪೀಠ ನೀಡಿರುವ ನಿರ್ದೇಶನಗಳಲ್ಲಿ ಯಾವುದೇ ಬದಾಲಾವಣೆ ಇರುವುದಿಲ್ಲ. ಆದಾಗ್ಯೂ, ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಅನುಮತಿ ಕೋರಿ ಬೆಂಗಳೂರು ಜಿಲ್ಲಾಧಿಕಾರಿ ಸ್ವೀಕರಿಸಿರುವ ಮನವಿ ಪತ್ರಗಳನ್ನು ಇದೇ 31ರಿಂದ ಸೀಮಿತ ಅವಧಿಗೆ ಪರಿಗಣಿಸಿ ಸರ್ಕಾರ ಸೂಕ್ತ ಆದೇಶ ಹೊರಡಿಸಬಹುದು’ ಎಂದು ವಿಭಾಗೀಯ ನ್ಯಾಯಪೀಠ ಸ್ಪಷ್ಟಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT