ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆಗಳ ಈಡೇರಿಕೆಗೆ ವಾರದ ಗಡುವು: ಸರ್ಕಾರಿ ವೈದ್ಯರಿಂದ ಮುಷ್ಕರದ ನಿರ್ಧಾರ

Last Updated 6 ಸೆಪ್ಟೆಂಬರ್ 2020, 20:57 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ವೇತನ ಪರಿಷ್ಕರಣೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದು, ವಿವಿಧ ಬೇಡಿಕೆಗಳನ್ನು ಒಂದು ವಾರದೊಳಗೆ ಈಡೇರಿಸದಿದ್ದಲ್ಲಿ ವೈದ್ಯಕೀಯ ಸೇವೆಗಳನ್ನು ಸ್ಥಗಿತ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ ಗುತ್ತಿಗೆ ವೈದ್ಯರು ಹಾಗೂ ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರ ನಡೆಸಿದ್ದರು. ಸರ್ಕಾರ ಅವರ ಬೇಡಿಕೆಯನ್ನು ಈಡೇರಿಸಿತ್ತು. ಇದೇ ವೇಳೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಪತ್ರ ಸಲ್ಲಿಸಿ, ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಿಕೊಂಡಿತ್ತು. ಅಷ್ಟೇ ಅಲ್ಲ, ನಿಗದಿತ ಅವಧಿಯೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಹಂತ, ಹಂತವಾಗಿ ಸೇವೆ ಸ್ಥಗಿತ ಮಾಡುವುದಾಗಿಯೂ ಆ ವೇಳೆ ತಿಳಿಸಿದ್ದರು.

ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ಬಳಿಕ ವೈದ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು. ಸರ್ಕಾರ ಕೂಡ ಆ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿ, ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು. ಆದರೆ, ಈವರೆಗೂ ಆ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿರುವುದು ವೈದ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಪರಿಣಾಮ ಈಗ ವೈದ್ಯರು ತುರ್ತು ಚಿಕಿತ್ಸೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಿಕಿತ್ಸೆಗಳನ್ನು ಮುಂದಿನ ವಾರದಿಂದ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ.

ಸಿಜಿಎಚ್‌ಸಿ ಮಾದರಿ:‘ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಏಳನೇ ವೇತನ ಆಯೋಗದ ವೇತನ ಶ್ರೇಣಿ ನೀಡಲಾಗಿದೆ. ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕಾಗಿ ಸಾಕಷ್ಟು ಶ್ರಮಿಸುತ್ತಿದ್ದಾರೆ. ಇಂಥವರಿಗೆ ಕೇಂದ್ರ ಸರ್ಕಾರದ ಸಿಜಿಎಚ್‌ಸಿ ಮಾದರಿ ವೇತನ ಪರಿಷ್ಕರಣೆ ಮಾಡುವ ಮೂಲಕ ಅವರ ನೆರವಿಗೆ ಸರ್ಕಾರ ಧಾವಿಸಬೇಕು’ ಎಂದು ಸಂಘದ ಅಧ್ಯಕ್ಷ ಡಾ.ಜಿ.ಎ.ಶ್ರೀನಿವಾಸ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಕೋವಿಡ್‌ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಕೆಲ ವೈದ್ಯರು ಮೃತಪಟ್ಟಿದ್ದಾರೆ. ಹಲವರು ಕೋವಿಡ್ ಪೀಡಿತರಾಗಿದ್ದಾರೆ. ಹಗಲಿರುಳು ಎನ್ನದೆ ಕೋವಿಡ್‌ ನಿಯಂತ್ರಣಕ್ಕೆ ವೈದ್ಯರು ಶ್ರಮಿಸುತ್ತಿದ್ದಾರೆ. ಆದರೆ, ಸರ್ಕಾರಕ್ಕೆ ಮಾತ್ರ ನಮ್ಮ ಸೇವೆ ಕಾಣಿಸಿದಂತಿಲ್ಲ.ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಗೆ ನೀಡಿರುವ 48 ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲು ಕೂಡ ಕ್ರಮಕೈಗೊಳ್ಳಬೇಕು. ಕೋವಿಡ್ ಚಿಕಿತ್ಸೆಯ ವೇಳೆ ಸೋಂಕಿತರಾದ ವೈದ್ಯರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಹಾಸಿಗೆ, ವೆಂಟಿಲೇಟರ್ ಮೀಸಲಿಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT