ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಆರೋಪಿಗಳಿಗೆ ರಾಜ್ಯಪಾಲರ ರಕ್ಷಣೆ: ವಿ.ಎಸ್‌. ಉಗ್ರಪ್ಪ

Last Updated 3 ಜುಲೈ 2021, 2:10 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ವಿಚಾರಣೆಗೆ ಅನುಮತಿ ನಿರಾಕರಿಸುವ ಮೂಲಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಭ್ರಷ್ಟಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಆರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಬಹುಮಹಡಿ ಅಪಾರ್ಟ್‌ಮೆಂಟ್‌ ಸಮುಚ್ಚಯ ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರನಿಂದ ಯಡಿಯೂರಪ್ಪ ಅವರ ಮಗ ಮತ್ತು ಮೊಮ್ಮಗ ₹ 25 ಕೋಟಿ ಲಂಚ ಪಡೆದಿದ್ದಾರೆ. ಈ ಕುರಿತು ವಿಚಾರಣೆಗೆ ಅನುಮತಿ ನಿರಾಕರಿಸುವ ಮೂಲಕ ರಾಜ್ಯಪಾಲರು ಆರೋಪಿಗಳನ್ನು ರಕ್ಷಿಸಿದ್ದಾರೆ’ ಎಂದು ದೂರಿದರು.

‘ಶೆಲ್‌’ ಕಂಪನಿಗಳನ್ನು ಸೃಷ್ಟಿಸಿ ಹಣ ಪಡೆದಿರುವುದಕ್ಕೆ ದಾಖಲೆಗಳಿವೆ. ಇದೇ ವಿಚಾರವಾಗಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿರುವ ಟಿ.ಜೆ. ಅಬ್ರಹಾಂ, ನ್ಯಾಯಾಲಯದಲ್ಲಿ ದೂರು ಸಲ್ಲಿಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದರು. ನಿಯಮದ ಪ್ರಕಾರ, ನಾಲ್ಕು ತಿಂಗಳೊಳಗೆ ರಾಜ್ಯಪಾಲರು ನಿರ್ಧಾರ ಕೈಗೊಳ್ಳಬೇಕಿತ್ತು. ಏಳೂವರೆ ತಿಂಗಳ ಬಳಿಕ ಅಬ್ರಹಾಂ ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಉಗ್ರಪ್ಪ ಹೇಳಿದರು.

ಕೆಲವರ ವಿರುದ್ಧದ ಆರೋಪಗಳನ್ನು ಮುಚ್ಚಿ ಹಾಕುವುದಕ್ಕಾಗಿ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.

ಮತ್ತೋರ್ವ ಮುಖಂಡ ಎಚ್‌.ಎಂ. ರೇವಣ್ಣ ಮಾತನಾಡಿ, ‘ಯಡಿಯೂರಪ್ಪ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಚೆಕ್‌ ಮೂಲಕ ಲಂಚ ಪಡೆದಿದ್ದರು. ಈಗ ಆರ್‌ಟಿಜಿಎಸ್‌ ಮೂಲಕ ಪಡೆದಿದ್ದಾರೆ. ಹಗರಣ ಮುಚ್ಚಲು ಕಸರತ್ತು ನಡೆಸುತ್ತಿದ್ದಾರೆ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT