ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲಾಭಿವೃದ್ಧಿಗೆ ಪ್ರಾಥಮಿಕ ಶಿಕ್ಷಣದಲ್ಲೇ ಪಠ್ಯ: ಸಿ.ಎನ್‌.ಅಶ್ವತ್ಥನಾರಾಯಣ

Last Updated 29 ಡಿಸೆಂಬರ್ 2020, 20:17 IST
ಅಕ್ಷರ ಗಾತ್ರ

ಬೆಂಗಳೂರು: ಉದ್ಯೋಗ ಮಾರುಕಟ್ಟೆಯ ಅಗತ್ಯಗಳಿಗೆ ಪೂರಕವಾಗಿ ಮಾನವ ಸಂಪನ್ಮೂಲ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಾಥಮಿಕ ಶಿಕ್ಷಣದ ಹಂತದಲ್ಲೇ ಕೌಶಲಾಭಿವೃದ್ಧಿಗೆ ಸಂಬಂಧಿಸಿದ ಪಠ್ಯಕ್ರಮ ಅಳವಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ನಗರದ ಡೇರಿ ವೃತ್ತದ ಕಲ್ಯಾಣ ಸುರಕ್ಷಾ ಭವನದಲ್ಲಿ ರಾಜ್ಯ ಕೌಶಲಾಭಿವೃದ್ಧಿ ಪ್ರಾಧಿಕಾರದ ನವೀಕೃತ ಕಚೇರಿಯ ಕಟ್ಟಡ ಮತ್ತು ಅಂತರರಾಷ್ಟ್ರೀಯ ವಲಸೆ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ‘ಹೊಸದಾಗಿ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡುತ್ತದೆ. ಅದಕ್ಕೆ ಪೂರಕವಾಗಿ ಶಿಕ್ಷಣದಲ್ಲಿ ತರುವ ಒತ್ತಾಸೆಯನ್ನು ರಾಜ್ಯ ಸರ್ಕಾರ ಹೊಂದಿದೆ’ ಎಂದರು.

ಸಾಂಪ್ರದಾಯಿಕ ಶಿಕ್ಷಣವನ್ನು ಮಾತ್ರ ನೀಡುವುದರಿಂದ ಜನರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ. ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಕೈಗಾರಿಕಾ ತರಬೇತಿ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಕೌಶಲ ರಹಿತ ಶಿಕ್ಷಣ ಪಡೆದಿರುವ ಯುವಕ, ಯುವತಿಯರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡುವುದಕ್ಕಾಗಿ ಪೀಣ್ಯ ಕೈಗಾರಿಕೆಗಳ ಸಂಘ, ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಹಾಗೂ ಕೌಶಲಾಭಿವೃದ್ಧಿ ನಿಗಮಗಳು ಒಪ್ಪಂದಕ್ಕೆ ಸಹಿ ಹಾಕಿದವು. ಅಪ್ರೆಂಟಿಸ್‌ಶಿಪ್‌ ಸ್ಥಾನಗಳನ್ನು ಗುರುತಿಸಲು ಮತ್ತು ಹೆಚ್ಚಿನ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್‌ಶಿಪ್‌ ಅವಕಾಶ ನೀಡಲು ಟೀಮ್‌ ಲೀಸ್‌ ವಿಶ್ವವಿದ್ಯಾಲಯ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯಗಳು ಒಪ್ಪಂದ ಮಾಡಿಕೊಂಡವು. ಸರ್ಕಾರಿ ಐಟಿಐ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು ಆಯುಕ್ತಾಲಯ ಮತ್ತು ಉದ್ಯಮ್‌ ಲರ್ನಿಂಗ್‌ ಫೌಂಡೇಶನ್‌ ಒಪ್ಪಂದಕ್ಕೆ ಸಹಿ ಹಾಕಿದವು.

ರಾಜ್ಯ ಕೌಶಲಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ರತ್ನಪ್ರಭಾ, ಶಾಸಕ ಉದಯ್‌ ಗರುಡಾಚಾರ್‌, ಕೌಶಲಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸೆಲ್ವಕುಮಾರ್‌, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತ ಡಾ.ತ್ರಿಲೋಕ ಚಂದ್ರ, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್‌ ಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT