ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಿಕ್ಷಣ ಸಂಸ್ಥೆಗಳ ಜತೆ ಸರ್ಕಾರ ಶಾಮೀಲು: ಸಿದ್ದರಾಮಯ್ಯ ಆರೋಪ

Last Updated 20 ಡಿಸೆಂಬರ್ 2020, 18:43 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಯಾವುದೇ ರೀತಿಯ ತರಗತಿಗಳನ್ನು ನಡೆಸದಿದ್ದರೂ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಬೆದರಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಜತೆ ಶಾಮೀಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

‘ರಾಜ್ಯ ಸರ್ಕಾರದ ಗೊಂದಲದ ನಿಲುವುಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಈ ಸಮಸ್ಯೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೊಣೆಗಾರರು. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಮತ್ತು ಪೋಷಕರ ನಡುವೆ ಜಗಳ ಸೃಷ್ಟಿಸಿದ್ದಾರೆ’ ಎಂದು ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ಯಾವುದೇ ರೀತಿಯ ನಿಯಂತ್ರಣವೂ ಇಲ್ಲ. ಪೂರ್ಣ ಶುಲ್ಕ ಪಾವತಿಗೆ ಒತ್ತಡ ಹೇರುತ್ತಿರುವ ಶಿಕ್ಷಣ ಸಂಸ್ಥೆಗಳು, ಆನ್‌ಲೈನ್‌ ತರಗತಿಗಳನ್ನು ಕಡಿತಗೊಳಿಸಿ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ‘ಬ್ಲಾಕ್‌ಮೇಲ್‌’ ಮಾಡುತ್ತಿವೆ. ತರಗತಿಗಳನ್ನು ನಡೆಸದಿದ್ದರೂ ಶುಲ್ಕ ಪಡೆದು ಪೋಷಕರನ್ನು ಸುಲಿಗೆ ಮಾಡಲಾಗುತ್ತಿದೆ. ಶಿಕ್ಷಣ ಸಚಿವರು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಶಾಲೆಗಳ ಪುನರಾರಂಭದ ವಿಚಾರದಲ್ಲಿ ಸಚಿವರು ಮತ್ತು ಅಧಿಕಾರಿಗಳು ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಶಿಕ್ಷಣ ಸಚಿವರು ತಕ್ಷಣವೇ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಪೋಷಕರ ಸಭೆ ಕರೆದು ಸಮಸ್ಯೆ ಪರಿಹಾರಕ್ಕೆ ಪಾರದರ್ಶಕವಾಗಿ ಪ್ರಯತ್ನಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT