ಕಾಯ್ದೆ ತಿದ್ದುಪಡಿಗೆ ಸಿದ್ಧ, ರದ್ದುಪಡಿಸುವುದಿಲ್ಲ: ಕೇಂದ್ರ ಸಚಿವ ಅಠಾವಳೆ
ಬೆಂಗಳೂರು: ಇತ್ತೀಚೆಗೆ ಜಾರಿಗೊಳಿಸಿರುವ ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಈ ಕಾಯ್ದೆಗಳನ್ನು ರದ್ದುಪಡಿಸಬೇಕೆಂಬ ಬೇಡಿಕೆಯನ್ನು ಒಪ್ಪುವುದಿಲ್ಲ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದರು.
ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೃಷಿ ಸಂಬಂಧಿ ಕಾಯ್ದೆಗಳ ಬದಲಾವಣೆಯಿಂದ ರೈತರಿಗೆ ಅನುಕೂಲವಾಗಲಿದೆ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳ ತಿದ್ದುಪಡಿಯಿಂದ ರೈತರಿಗೆ ಯಾವುದೇ ತೊಂದರೆ ಆಗುವುದಿಲ್ಲ’ ಎಂದರು.
ರೈತರ ಜತೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಚರ್ಚೆಯ ಬಳಿಕ ಕಾಯ್ದೆಗಳ ತಿದ್ದುಪಡಿ ಕುರಿತು ನಿರ್ಧಾರಕ್ಕೆ ಬರಲಾಗುವುದು. ಆದರೆ, ಈಗಾಗಲೇ ರೈತರ ಪ್ರತಿಭಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ ಎಂದು ಟೀಕಿಸಿದರು.
ಯಾವುದೇ ತೊಂದರೆ ಆಗದು: ಅಂತರ್ ಧರ್ಮೀಯ ವಿವಾಹ ಆಗುವವರಿಗೆ ಲವ್ ಜಿಹಾದ್ ತಡೆ ಕಾನೂನಿನಿಂದ ತೊಂದರೆ ಆಗುವುದಿಲ್ಲ. ದುರುದ್ದೇಶದಿಂದ ಹಾಗೂ ಒತ್ತಡ ಹೇರಿ ಬಲವಂತದಿಂದ ಮತಾಂತರ ಮಾಡಿ, ಮದುವೆ ಆಗುವುದಕ್ಕೆ ತಡೆ ಬೀಳಲಿದೆ. ಸಂವಿಧಾನದತ್ತವಾಗಿ ದೊರಕಿರುವ ಅಂತರ್ ಧರ್ಮೀಯ ವಿವಾಹದ ಹಕ್ಕಿಗೆ ಯಾವ ತೊಂದರೆಯೂ ಆಗುವುದಿಲ್ಲ ಎಂದು ಅಠಾವಳೆ ಹೇಳಿದರು.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೋಹತ್ಯೆ ತಡೆಗೆ ಕಠಿಣ ಕಾನೂನು ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ. ಗೋವುಗಳ ವಿಷಯವನ್ನು ಮುಂದಿಟ್ಟುಕೊಂಡು ದಲಿತರ ಮೇಲೆ ನಡೆಯುವ ಹಲ್ಲೆಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಗೋಶಾಲೆಗಳಿಗೆ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಒತ್ತಾಯಿಸಿದರು.
ದೌರ್ಜನ್ಯಕ್ಕೆ ಮೇಲ್ಜಾತಿಯೇ ಕಾರಣ: ದೇಶದ ಎಲ್ಲ ರಾಜ್ಯಗಳಲ್ಲೂ ದಲಿತರ ಮೇಲೆ ನಡೆಯುವ ದೌರ್ಜನ್ಯಕ್ಕೆ ಮೇಲ್ಜಾತಿಯೇ ಕಾರಣ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ ಎಂದು ಹೇಳಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.