ಬೆಂಗಳೂರು: ‘ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಗೌರವಧನ ಹೆಚ್ಚಳ ಮಾಡುವ ಸಂಬಂಧ ಶೀಘ್ರ ಅಂತಿಮ ತೀರ್ಮಾನಿಸಲಾಗುವುದು’ ಎಂದು ವಿಧಾನ ಪರಿಷತ್ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಸುನೀಲ್ ಗೌಡ ಪಾಟೀಲ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಪರವಾಗಿ ಉತ್ತರ ನೀಡಿದ ಅವರು, ‘ಗೌರವಧನ ಹೆಚ್ಚಿಸುವ ಕುರಿತು ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ, ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಗ್ರಾಮ ಪಂಚಾಯಿತಿ ಸದಸ್ಯರಿಗೆ ಕನಿಷ್ಠ ಕೂಲಿಗಿಂತ ಕಡಿಮೆ ಗೌರವಧನ ನೀಡಲಾಗುತ್ತಿದೆ. ಸದ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ₹ 3 ಸಾವಿರ, ಉಪಾಧ್ಯಕ್ಷರಿಗೆ ₹ 2 ಸಾವಿರ ಮತ್ತು ಸದಸ್ಯರಿಗೆ ₹ 1 ಸಾವಿರ ತಿಂಗಳಿಗೆ ಗೌರವಧನ ನೀಡಲಾಗುತ್ತಿದೆ. ಅದನ್ನು ಕ್ರಮವಾಗಿ ₹ 5 ಸಾವಿರ, ₹ 4 ಸಾವಿರ ಮತ್ತು ₹ 3 ಸಾವಿರಕ್ಕೆ ಹೆಚ್ಚಿಸಬೇಕು. ಈ ಗೌರವಧನವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಅವರೆಲ್ಲರಿಗೂ ಉಚಿತ ಬಸ್ ಪಾಸ್ ನೀಡಬೇಕು’ ಎಂದು ಸುನೀಲ್ ಗೌಡ ಪಾಟೀಲ ಅವರು ಸದನದ ಗಮನ ಸೆಳೆದರು. ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಸೇರಿದಂತೆ ಹಲವು ಸದಸ್ಯರು ಪಾಟೀಲ ಅವರ ಪ್ರಸ್ತಾವಕ್ಕೆ ಬೆಂಬಲ ವ್ಯಕ್ತಪಡಿಸಿದರು.
‘ಅಧಿವೇಶನ ಮುಗಿಯುತ್ತಿದ್ದಂತೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ 25 ವಿಧಾನ ಪರಿಷತ್ ಸದಸ್ಯರ ಸಭೆ ಕರೆದು ಈ ಬಗ್ಗೆ ಚರ್ಚೆ ನಡೆಸಲಾಗುವುದು. ಪಂಚಾಯಿತಿ ಸದಸ್ಯರಿಗೆ ಅವರವರ ಜಿಲ್ಲೆ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಸಂಚರಿಸಲು ಉಚಿತವಾಗಿ ಬಸ್ ಪಾಸ್ ನೀಡುವ ಸಂಬಂಧ ಕೆಎಸ್‍ಆರ್‌ಸಿ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು‘ ಎಂದೂ ಕೋಟ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.