ಶನಿವಾರ, ಸೆಪ್ಟೆಂಬರ್ 25, 2021
25 °C

ಪರೀಕ್ಷೆ ಇಲ್ಲದೆ ನೇರ ಬಡ್ತಿಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗ್ರಾಮ ಪಂಚಾಯಿತಿ 5 ವರ್ಗಗಳ ನೌಕರರಿಗೆ ಯಾವುದೇ ಪರೀಕ್ಷೆ ನಡೆಸದೆ ಸೇವಾ ಹಿರಿತನವನ್ನಷ್ಟೇ ಆಧರಿಸಿ ಬಡ್ತಿ ನೀಡಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದ ಕಡೆಗೆ ಹೊರಟ ನೌಕರರನ್ನು ರೈಲು ನಿಲ್ದಾಣದ ಆವರಣದಲ್ಲೇ ಪೊಲೀಸರು ತಡೆದರು. ಅಲ್ಲಿಯೇ ಧರಣಿ ಮುಂದುವರಿಸಿದ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಸೆ.5ರಂದು ಹೊರಡಿಸಿರುವ ಆದೇಶದಲ್ಲಿ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆ ಕೈಬಿಡಬೇಕು ಎಂದು ಒತ್ತಾಯಿಸಿದರು.

2012 ಮಾ.31ರ ಅಧಿಸೂಚನೆಯಂತೆ 10 ವರ್ಷ ಸೇವೆ ಸಲ್ಲಿಸಿದ ಬಿಲ್ ಕಲೆಕ್ಟರ್, ಬೆರಳಚ್ಚುಗಾರ, ಕ್ಲರ್ಕ್‌ ಕಂ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ಮಾತ್ರ ಒಂದೇ  ಜ್ಯೇಷ್ಠತಾ ಪಟ್ಟಿಯಲ್ಲಿ ಸೇರಿಸಬೇಕು. 15ನೇ ಹಣಕಾಸಿನಲ್ಲಿ ಸಂಬಳಕ್ಕೆ ಮೀಸಲಿಟ್ಟ ಮೊತ್ತವನ್ನು ಕ್ರಿಯಾ ಯೋಜನೆಯಲ್ಲಿ ಸೇರಿಸಿಲ್ಲ. ಸಂಬಳ ನೀಡಲು ಬೇಕಾದ ಮೊತ್ತವನ್ನು ಅನುದಾನದಿಂದ ಪ್ರತ್ಯೇಕಿಸಿ ಸಿಬ್ಬಂದಿ ಸಂಬಳದ ಖಾತೆಗೆ ಜಮಾ ಮಾಡಬೇಕು ಎಂದು ಮನವಿ ಮಾಡಿದರು.

‘ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಕಂಪ್ಯೂಟರ್ ಆಪರೇಟರ್‌ಗಳ ಸೇವಾ ಅವಧಿ ಪರಿಗಣಿಸಿ ನೇರ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಬೇಕು. ತಿದ್ದುಪಡಿ ತರುವಾಗ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್, ಕ್ಲರ್ಕ್, ವಾಟರ್ ಮನ್, ಅಟೆಂಡರ್, ಸ್ವೀಪರ್‌ಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಉತ್ತೀರ್ಣರಾದ ಎಲ್ಲ ನೌಕರರನ್ನು ಪರಿಗಣಿಸಬೇಕು’ ಎಂದು ಆಗ್ರಹಿಸಿದರು.

‘2012ರ ವೃಂದ ಮತ್ತು ನೇಮಕಾತಿ ನಿಯಮದಂತೆ ಗ್ರೇಡ್–2 ಕಾರ್ಯದರ್ಶಿ ಹುದ್ದೆಗಳಿಗೆ ಶೇ 70ರಷ್ಟು, ಲೆಕ್ಕ ಸಹಾಯಕ ಹುದ್ದೆಗಳಿಗೆ ಶೇ 10ರಷ್ಟು ಬಿಲ್‌ ಕಲೆಕ್ಟರ್‌ಗಳನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಕನಿಷ್ಠ ಕೂಲಿ ಪರಿಷ್ಕರಿಸಿ 5 ವರ್ಷಗಳು ಕಳೆದಿದ್ದು, ಬೆಲೆ ಏರಿಕೆ ಆಧರಿಸಿ ಕನಿಷ್ಠ ಕೂಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು. ವೇತನಕ್ಕಾಗಿ ಕೂಡಲೇ ₹700 ಕೋಟಿ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.‌

ನಂಜನಗೂಡು, ಚಿಂತಾಮಣಿ, ಬಾದಾಮಿ ತಾಲ್ಲೂಕುಗಳಲ್ಲಿ ಸರಿಯಾಗಿ ವೇತನ ಸಿಗದಿದ್ದರಿಂದ ಬೇಸತ್ತು ಮೂವರು ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ ಬಂಧಿಸಬೇಕು ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ವಿ.ಪಿ. ಕುಲಕರ್ಣಿ ಮತ್ತು ಪ್ರಧಾನ ಕಾರ್ಯದರ್ಶಿ ಜಿ. ರಾಮಕೃಷ್ಣ ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು