ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಗಳ ಆರ್ಥಿಕತೆಗೆ ಕೊಳ್ಳಿ ಇಟ್ಟ ಕೇಂದ್ರ ಸರ್ಕಾರ: ಕುಮಾರಸ್ವಾಮಿ ಟೀಕೆ

Last Updated 29 ಆಗಸ್ಟ್ 2020, 5:15 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯಗಳ ಆರ್ಥಿಕತೆಗೆ ಕೊಳ್ಳಿ ಇಟ್ಟಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೇಂದ್ರ ಸರ್ಕಾರದ ನಿಲುವುಗಳನ್ನು ಟೀಕಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ’ ಎಂದು ಉಲ್ಲೇಖಿಸಿದ್ದಾರೆ.

‘ಕೊರೊನಾ ಸಂಕಷ್ಟ ‘ದೇವರ ಅಸಮಾನ್ಯ ಆಟ’ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ 'ಕೊಳ್ಳಿ' ಇಟ್ಟಿದೆ’ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

‘ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

‘ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು ₹97 ಸಾವಿರ ಕೋಟಿ ಹಾಗೂ ಆದಾಯ ಕೊರತೆ ಎದುರಾಗಲಿರುವ ₹2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ. ‘ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ’ ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು? ಕೋವಿಡ್–19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ತಾಳ ತಪ್ಪಿದ ಕೇಂದ್ರ ಸರ್ಕಾರದ ದಿಕ್ಕೆಟ್ಟ ಅರ್ಥವ್ಯವಸ್ಥೆ ಮತ್ತು ಮುನ್ನೋಟದ ಅಂದಾಜು ಗ್ರಹಿಸದ ವೈಫಲ್ಯದ ಫಲವಾಗಿ ರಾಜ್ಯ ಸರ್ಕಾರಗಳು ಹಗ್ಗ ಕೊಟ್ಟು ಕೈ ಕಟ್ಟಿಸಿಕೊಂಡ ಪರಿಸ್ಥಿತಿಗೆ ಸಿಲುಕಿ ನಲುಗುತ್ತಿವೆ. ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ ಆರ್‌ಬಿಐಯಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT