ಮಂಗಳವಾರ, ಏಪ್ರಿಲ್ 13, 2021
25 °C

ಅತಿಥಿ ಉಪನ್ಯಾಸಕರ ಬೇಡಿಕೆ: ಚರ್ಚಿಸಿ ತೀರ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕನಿಷ್ಠ ₹ 25 ಸಾವಿರ ವೇತನ‌ ನಿಗದಿ, ಸೇವಾ ಭದ್ರತೆ ಒದಗಿಸಬೇಕೆಂಬ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ, ತೀರ್ಮಾನಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಭರವಸೆ ನೀಡಿದರು.

ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಯಲ್ಲಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳ ಜತೆ ಸೋಮವಾರ ಮಾತುಕತೆ ನಡೆಸಿದ ಬಳಿಕ ಈ ವಿಷಯ ತಿಳಿಸಿದ ಅವರು, ‘ಮಾನವೀಯತೆ ಆಧಾರದಲ್ಲಿ ಬೇಡಿಕೆಗಳನ್ನು ಪರಿಶೀಲಿಸಲಾಗುವುದು’ ಎಂದರು.

‘ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ  ನೀಡುವ ವಿಷಯವನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ನಿರ್ಣಯ ಕೈಗೊಳ್ಳುವಂತೆ ಸಭಾಪತಿ ಮತ್ತು ಶಿಕ್ಷಕರ ಕ್ಷೇತ್ರಗಳನ್ನು ಪ್ರತಿನಿಧಿಸುವ ಪರಿಷತ್‌ ಸದಸ್ಯರು ಮನವಿ ಮಾಡಿದ್ದಾರೆ. ಹತ್ತು ವರ್ಷ ಸೇವಾವಧಿ ಪೂರೈಸಿರುವ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಿ, ಪ್ರತಿ ಹನ್ನೆರಡು ತಿಂಗಳಿಗೊಮ್ಮೆ ಮರು ನೇಮಕ ಮಾಡಿಕೊಳ್ಳುವುದು ಬೇಡ. ಕಾಯಂ ಆಗುವವರೆಗೂ ಬಳಸಿಕೊಳ್ಳುತ್ತಿರಬೇಕು. ಮಾಸಿಕ ಕನಿಷ್ಠ ₹ 25 ಸಾವಿರ ಗೌರವಧನ ನಿಗದಿ ಮಾಡಬೇಕು ಎಂಬ ಬೇಡಿಕೆಗಳಿವೆ’ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಆಯನೂರು ಮಂಜುನಾಥ್‌, ಅರುಣ್‌ ಶಹಾಪೂರ‌, ಎಸ್.ಎಲ್. ಬೋಜೇಗೌಡ, ಎಸ್.ವಿ. ಸಂಕನೂರ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು