ಶನಿವಾರ, ಮೇ 21, 2022
28 °C

ಪಿಎಸ್‌ಐ ಅರ್ಜುನ್‌ ಅವರನ್ನು ಜೈಲಿಗೆ ಕಳುಹಿಸಿ -ಎಲ್‌.ಹನುಮಂತಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವಿಚಾರಣೆ ನೆಪದಲ್ಲಿ ದಲಿತ ಯುವಕನನ್ನು ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಅರ್ಜುನ್‌ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಜೊತೆಗೆ ಸೇವೆಯಿಂದಲೇ ವಜಾಗೊಳಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಒತ್ತಾಯಿಸಿದ್ದಾರೆ. 

‘ಕಿರುಗುಂದ ಗ್ರಾಮದ ಕೆ.ಎಲ್‌.ಪುನೀತ್‌ ಜೊತೆ ಅರ್ಜುನ್‌ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಅವರು ನಡೆದುಕೊಂಡಿರುವ ರೀತಿ ಖಂಡನೀಯ. ಅವರ ಕ್ರೂರ ವರ್ತನೆಯ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದರೂ ಸರ್ಕಾರವು ಆರಂಭದಲ್ಲಿ ಯಾವುದೇ ಕ್ರಮ ಕೈಗೊಳ್ಳದಿದ್ದದ್ದು ವಿಷಾದನೀಯ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಮೇಲೂ ಮೌನವಹಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ.ಹಾಕೆ ಅವರನ್ನು ಹೊಣೆಗಾರರನ್ನಾಗಿಸಿ ಅಮಾನತುಗೊಳಿಸಬೇಕು. ಘಟನೆಯ ವೇಳೆ ಕರ್ತವ್ಯದಲ್ಲಿದ್ದ ಪೇದೆಗಳ ಮೇಲೂ ಎಫ್‌ಐಆರ್‌ ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಇಂತಹ ಕ್ರೂರ ಘಟನೆಯನ್ನು ಸಾಮಾನ್ಯ ಪ್ರಕರಣವೆಂದು ಪರಿಗಣಿಸಿರುವ ಸರ್ಕಾರ ಇದನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಕೋವಿಡ್‌ ಕಾಲದಲ್ಲೂ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಇದು ಸರ್ಕಾರದ ಬೇಜವಾಬ್ದಾರಿತನಕ್ಕೆ ಸಾಕ್ಷಿ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು