ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ ಪರೀಕ್ಷೆ ರದ್ದು: SSLC ಪರೀಕ್ಷೆ ನಡೆಸುವುದು ಮತಿಹೀನ ನಿರ್ಧಾರ -ಎಚ್‌ಡಿಕೆ

Last Updated 4 ಜೂನ್ 2021, 16:01 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿರುವ ಸಂದರ್ಭದಲ್ಲೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವುದು ಮತಿಹೀನ ನಿರ್ಧಾರ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಇದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಶಿಕ್ಷಣ ಸಚಿವರ ಐಲು–ಪೈಲು ನಿರ್ಧಾರದಿಂದ ರಾಜ್ಯದ ಜನರು ಹಾದಿ, ಬೀದಿಗಳಲ್ಲಿ ನಗುವಂತಾಗಿದೆ. ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಎರಡು ಪರೀಕ್ಷೆ ನಡೆಸುವ ಮೊಂಡುತನವನ್ನು ಸರ್ಕಾರ ಕೈಬಿಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಶಿಕ್ಷಣ ಸಚಿವರು ಮಕ್ಕಳ ಜೀವದ ಜತೆ ಚೆಲ್ಲಾಟವಾಡುವ ರೀತಿಯಲ್ಲಿ ಕೈಗೊಂಡಿರುವ ಎಡಬಿಡಂಗಿತನದ ನಿರ್ಧಾರಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಡಿವಾಣ ಹಾಕಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲದಿದ್ದರೆ ಅದೇ ನಿರ್ಧಾರ ಎಸ್ಸೆಸ್ಸೆಲ್ಸಿ ಮಕ್ಕಳಿಗೂ ಅನ್ವಯ ಆಗಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿಯ ’ಗುಮ್ಮ’ಕ್ಕೆ ಹೆದರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಆದರೆ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಶಿಕ್ಷಣ ಸಚಿವರು ಮುಂದಾಗಿದ್ದಾರೆ. ಇವರು ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವರು ಮೌನಿಯಾಗಿದ್ದಾರೆ. ಬಿಸಿಯೂಟ ಸಿಗದೆ ಕಂಗಾಲಾಗಿರುವ ಬಡ ಮಕ್ಕಳ ಬಗ್ಗೆಯೂ ಮಾತನಾಡುವುದಿಲ್ಲ’ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT