ಬೆಂಗಳೂರು: ‘ಮುಖ್ಯಮಂತ್ರಿ ಆಗಿದ್ದಾಗ ನಾನು ಮಾಡಿದ ಗ್ರಾಮ ವಾಸ್ತವ್ಯಕ್ಕೆ ಮಹಾತ್ಮ ಗಾಂಧೀಜಿ ಅವರೇ ಸ್ಪೂರ್ತಿ ಮತ್ತು ಆದರ್ಶ. ಗ್ರಾಮ ವಾಸ್ತವ್ಯ ಎನ್ನುವುದು ನಾಟಕೀಯವಾಗಿ ಮಾಡಲಿಲ್ಲ. ಆತ್ಮತೃಪ್ತಿಗಾಗಿ, ಜನರ ಕೆಲಸ ಮಾಡುವುದಕ್ಕೆ ಕಾರ್ಯಕ್ರಮ ಜಾರಿಗೊಳಿಸಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪೇಜಾವರ ಶ್ರೀಗಳು ಹಾಗೂ ಗ್ರಾಮ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ನನ್ನ ಗ್ರಾಮ ವಾಸ್ತವ್ಯದಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸುವುದಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ. ಆ ವಿಚಾರಗಳ ಬಗ್ಗೆ ಹಂಸಲೇಖ ಅವರು ಮಾತನಾಡುವ ಅಗತ್ಯವಿರಲಿಲ್ಲ. ಮುಖ್ಯವಾಗಿ ಧರ್ಮ ಹಾಗೂ ಧಾರ್ಮಿಕ ಗುರುಗಳ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ’ ಎಂದರು.
ಬಿಬಿಎಂಪಿ ಚುನಾವಣೆಗೆ ಸಜ್ಜು: ನಮ್ಮ ಪಕ್ಷವನ್ನು ಪಾಲಿಕೆ ಚುನಾವಣೆಗೆ ಸಜ್ಜು ಮಾಡುತ್ತಿದ್ದೇವೆ. ಫೆಬ್ರುವರಿಯಲ್ಲಿ ಬಿಬಿಎಂಪಿ ಚುನಾವಣೆ ಎನ್ನುವ ಸುದ್ದಿ ಇದೆ. ಹೀಗಾಗಿ ಪಕ್ಷದ ಸಂಘಟನೆಗೆ ಹೆಚ್ಚು ಗಮನ ಕೊಡಲಾಗುತ್ತದೆ. ವಾರ್ಡ್ ವಿಂಗಡಣೆ ಕೆಲಸ ನಡೆಯುತ್ತಿದೆ. ನಗರದ ಏಳೆಂಟು ವಿಧಾನಸಭೆ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಉತ್ತಮ ಶಕ್ತಿ ಹೊಂದಿದೆ. ಉಳಿದ ಕ್ಷೇತ್ರಗಳಲ್ಲಿ ಬಲ ಹೆಚ್ಚಿಸಿಕೊಳ್ಳುವ ಬಗ್ಗೆಯೂ ಚರ್ಚೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಮುಂದಿನ ಪಾಲಿಕೆ ಚುನಾವಣೆ (ಬಿಬಿಎಂಪಿ) ಹಾಗೂ 2023ರ ವಿಧಾನಸಭೆ ಚುನಾವಣೆಗೆ ರಾಜಧಾನಿಯ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ಜನತಾ ಸಂಗಮ ನಡೆಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.
ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರು ನಗರದ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು, ಐಟಿ –ಬಿಟಿ, ನಮ್ಮ ಮೆಟ್ರೋ, ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಬಿಟ್ ಕಾಯಿನ್ ಗೊಂದಲ: ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ತನಿಖೆಯನ್ನು ಇಡಿಗೆ (ಜಾರಿ ನಿರ್ದೇಶನಾಲಯ) ಕೊಡಲಾಗಿದೆ ಎನ್ನುತ್ತಿದ್ದಾರೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ. ಮುಖ್ಯ ಆರೋಪಿಯನ್ನು ಏಳೆಂಟು ಬಾರಿ ಬಂಧಿಸಿ ತನಿಖೆಗೆ ಒಳಪಡಿಸಲಾಗಿದೆ. ಸರ್ಕಾರವು ಈ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ತನಿಖೆ ನಡೆಸಬೇಕು ಎಂದು ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.
ಶ್ರೀಕೃಷ್ಣ (ಶ್ರೀಕಿ) ಜೀವಕ್ಕೆ ಅಪಾಯ ಇದೆ. ಆತನಿಗೆ ಪೊಲೀಸ್ ರಕ್ಷಣೆ ಕೊಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಇಷ್ಟು ವರ್ಷ ಆತನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಕೆ ಇದೆ ಎಂದರೆ ಹೇಗೆ? ಕಾಂಗ್ರೆಸ್ ಪಕ್ಷಕ್ಕೆ ಈ ಬಗ್ಗೆ ನಿಖರ ಮಾಹಿತಿ ಇರಬೇಕು. ರಕ್ಷಣೆ ನೀಡುವುದು ತಪ್ಪಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.