ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿದುಳು ಜ್ವರ: 48 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

Last Updated 4 ಡಿಸೆಂಬರ್ 2022, 18:45 IST
ಅಕ್ಷರ ಗಾತ್ರ

ಬೆಂಗಳೂರು: ಮಿದುಳು ಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯು 1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ‘ಜೆನವ್ಯಾಕ್ ಜೆಇ’ ಲಸಿಕೆ ವಿತರಣಾ ಅಭಿಯಾನವನ್ನು ಸೋಮವಾರದಿಂದ ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ 48 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಳ್ಳಲಾಗಿದೆ.

ಈ ಮಿದುಳು ಜ್ವರವನ್ನು ಜಪಾನೀಸ್ ಎನ್‍ಸೆಫಲೈಟಿಸ್’ (ಜೆಇ) ಪಿಡುಗು ಎಂದು ಗುರುತಿಸಲಾಗಿದೆ.‘ಪ್ಲೇವಿವೈರಸ್’ ಎಂಬವೈರಾಣುವಿನಿಂದ ಬರುವ ಈ ಜ್ವರ, ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ.

‘ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯನ್ನು ‘ಜೆಇ ಎಂಡೆಮಿಕ್’ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ ಒಂಬತ್ತು ತಿಂಗಳು ತುಂಬಿದ ನಂತರ ಮೊದಲನೇ ಡೋಸ್, ಒಂದು ವರ್ಷದ ಬಳಿಕ ಎರಡನೇ ಡೋಸ್ ಲಸಿಕೆ ನೀಡಲಾಗುತ್ತದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

‘ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಈ ಅಭಿಯಾನದಲ್ಲಿ ಒಂದರಿಂದ ಹದಿನೈದು ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಡೋಸ್ ಲಸಿಕೆ ನೀಡಲಾಗುವುದು‌’ ಎಂದು ಹೇಳಿದ್ದಾರೆ.

ಪ್ರಕರಣ ಪತ್ತೆ: ‘ಜೆಇ ಮಿದುಳು ಜ್ವರದ ಮೊದಲ ಪ್ರಕರಣ 1955ರಲ್ಲಿ ತಮಿಳುನಾಡಿನ ವೆಲ್ಲೂರಿನಲ್ಲಿ ವರದಿಯಾಗಿತ್ತು. ಕರ್ನಾಟಕದ ಕೋಲಾರದಲ್ಲಿ 1978ರಲ್ಲಿ ಈ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ವರದಿಯಾಗುತ್ತಿದೆ. 2016ರಲ್ಲಿ 11 ಪ್ರಕರಣಗಳು, 2017ರಲ್ಲಿ 23 ಪ್ರಕರಣಗಳು, 2018ರಲ್ಲಿ 35 ಪ್ರಕರಣಗಳು, 2019ರಲ್ಲಿ 33 ಪ್ರಕರಣಗಳು, 2020ರಲ್ಲಿ 19 ಪ್ರಕರಣಗಳು, 2021ರಲ್ಲಿ 25 ಪ್ರಕರಣಗಳು ಹಾಗೂ 2022ರಲ್ಲಿ 21 ಪ್ರಕರಣಗಳು ಪತ್ತೆಯಾಗಿವೆ’ ಎಂದು ತಿಳಿಸಿದ್ದಾರೆ.

ಶಾಲೆಗಳಲ್ಲಿ ಲಸಿಕೆ ವಿತರಣೆ

‘ಡಿಸೆಂಬರ್ ಮೊದಲನೇ ವಾರ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಲಾಗುವುದು. ನಂತರದ ಎರಡುವಾರ ಎಲ್ಲ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕಾ ಅಭಿಯಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಸರ್ಕಾರ ಉಚಿತವಾಗಿ ‘ಜೆನವ್ಯಾಕ್ ಜೆಇ’ ಲಸಿಕೆಗಳನ್ನು ಸರಬರಾಜು ಮಾಡಿದೆ’ ಎಂದು ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

‘ರೋಗ ಪತ್ತೆ ಮಾಡಲು ರಾಜ್ಯದಲ್ಲಿ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿಗಳನ್ನು (ಎಸ್‍ಎಸ್‍ಎಲ್‍) ಸಜ್ಜುಗೊಳಿಸಲಾಗಿದೆ. ಬೆಂಗಳೂರಿನಲ್ಲಿರುವನಿಮ್ಹಾನ್ಸ್-ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ಬಳ್ಳಾರಿಯ ವಿಮ್ಸ್, ಹುಬ್ಬಳ್ಳಿಯ ಕಿಮ್ಸ್, ಕೋಲಾರದ ಡಿಪಿಎಚ್‍ಎಲ್, ಉಡುಪಿಯ ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್ ಹಾಗೂ ಬೆಂಗಳೂರಿನ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರದಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT