ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3ನೇ ಅಲೆ: ಮರಣ ತಡೆಗೆ ಐಸಿಯು ಹಾಸಿಗೆ ದ್ವಿಗುಣ

3ನೇ ಅಲೆ: ಮೂರು ತಿಂಗಳಲ್ಲಿ ವೈದ್ಯಕೀಯ ಸೌಕರ್ಯ ಹೆಚ್ಚಿಸಲು ಯೋಜನೆ
Last Updated 20 ಜುಲೈ 2021, 18:26 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಮೂರನೇ ಅಲೆಯು ಈ ವರ್ಷದ ಅಂತ್ಯದೊಳಗೆ ಕಾಣಿಸಿಕೊಳ್ಳುವ ಬಗ್ಗೆ ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಆದ್ದರಿಂದ ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕ (ಐಸಿಯು) ಹಾಸಿಗೆ ಹಾಗೂ ವೈದ್ಯಕೀಯ ಆಮ್ಲಜನಕ ಸಂಪರ್ಕ ಹೊಂದಿರುವ ಹಾಸಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಎರಡನೇ ಅಲೆಯಲ್ಲಿ ದಿಢೀರ್ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡ ಪರಿಣಾಮ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಮಸ್ಯೆ ತಲೆದೋರಿದ್ದವು. ಸೋಂಕಿತರು ಐಸಿಯು ಹಾಸಿಗೆ, ವೈದ್ಯಕೀಯ ಆಮ್ಲಜನಕ ಸಂಪರ್ಕ ಹೊಂದಿರುವ ಹಾಸಿಗೆಗಳಿಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದೊಂದು ತಿಂಗಳಿಂದ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿರುವ ಕಾರಣ ಆಸ್ಪತ್ರೆಗಳಲ್ಲಿ ಶೇ 85 ರಷ್ಟು ಹಾಸಿಗೆಗಳು ಖಾಲಿ ಉಳಿದಿವೆ.

ಮೂರನೇ ಅಲೆಯ ಕಾರಣ 50 ಸಾವಿರಕ್ಕೂ ಅಧಿಕ ಹಾಸಿಗೆಗಳನ್ನು ಹಾಗೇ ಉಳಿಸಿಕೊಳ್ಳಲಾಗಿದೆ. ಅದಾಗಿಯೂ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ 25 ಐಸಿಯು ಹಾಸಿಗೆಗಳನ್ನು ಅಳವಡಿಕೆ ಮಾಡಲಾಗುತ್ತಿದೆ. 18 ವರ್ಷದೊಳಗಿನವರಿಗೆ ಲಸಿಕೆ ಸದ್ಯ ಲಭ್ಯವಿರದ ಕಾರಣ ಮೂರನೇ ಅಲೆಯಲ್ಲಿ 3.4 ಲಕ್ಷ ಮಕ್ಕಳು ಕೋವಿಡ್ ಪೀಡಿತರಾಗುವ ಸಾಧ್ಯತೆಯ ಬಗ್ಗೆ ರಾಜ್ಯ ಸರ್ಕಾರ ರಚಿರುವ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿಯು ಲೆಕ್ಕಾಚಾರ ಹಾಕಿದೆ. ಹೀಗಾಗಿ, ಆಸ್ಪತ್ರೆಗಳಲ್ಲಿ ವೈದ್ಯಕೀಯ ಮೂಲಸೌಕರ್ಯವನ್ನು ಹೆಚ್ಚಿಸಲಾಗುತ್ತಿದೆ.

ಮಕ್ಕಳ ಚಿಕಿತ್ಸೆಗೆ ವ್ಯವಸ್ಥೆ: ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಬಿ.ಪಿ.ಮಾನಿಟರ್‌ಗಳು, ಆಮ್ಲಜನಕ ಸಾಂದ್ರಕ ಸಾಧನಗಳು, ಮಕ್ಕಳ ಹಾಸಿಗೆಗಳಿಗೆ ವೆಂಟಿಲೇಟರ್‌ಗಳ ಅಳವಡಿಕೆ ಸೇರಿದಂತೆ ವಿವಿಧ ವೈದ್ಯಕೀಯ ಸಾಧನಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಮೂರು ತಿಂಗಳೊಳಗೆ ಈ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

‘ಮಕ್ಕಳಿಗೆ ಸದ್ಯ ಲಸಿಕೆ ಇರದ ಕಾರಣ ಅವರು ಮೂರನೇ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುವ ಬಗ್ಗೆ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಐಸಿಯು ಹಾಸಿಗೆಗಳನ್ನು ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆಚ್ಚಳ ಮಾಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಗಳಲ್ಲಿ 13 ಕಿಲೋ ಲೀಟರ್ ಸಾಮರ್ಥ್ಯದ ದ್ರವರೂಪದ ವೈದ್ಯಕೀಯ ಆಮ್ಲಜನಕ ಟ್ಯಾಂಕ್ ಅಳವಡಿಕೆ ಮಾಡಲಾಗುತ್ತಿದೆ. ತಾಲ್ಲೂಕಾ ಆಸ್ಪತ್ರೆಗಳಲ್ಲಿ 6 ಕಿಲೋ ಲೀಟರ್ ಸಾಮರ್ಥ್ಯದ ಟ್ಯಾಂಕ್ ಅಳವಡಿಸಲಾಗುವುದು’ ಎಂದು ಆರೋಗ್ಯ ಇಲಾಖೆಯ ಆಯುಕ್ತ ಡಾ.ಕೆ.ವಿ.ತ್ರಿಲೋಕ ಚಂದ್ರ ತಿಳಿಸಿದರು.

3,249 ಐಸಿಯು ಹಾಸಿಗೆ ಅಳವಡಿಕೆ

ಮೊದಲ ಅಲೆಯಲ್ಲಿ 9.73 ಲಕ್ಷ ಮಂದಿ ಕೋವಿಡ್ ಪೀಡಿತರಾಗಿದ್ದರು. ಸೋಂಕಿನ ತೀವ್ರತೆ ಕಡಿಮೆಯಿದ್ದರೂ 12 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು. ಎರಡನೇ ಅಲೆಯಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ 19 ಲಕ್ಷಕ್ಕೂ ಅಧಿಕ ಮಂದಿ ಸೋಂಕಿತರಾಗಿದ್ದಾರೆ. ಸೋಂಕಿನ ತೀವ್ರತೆಗೆ 24 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಮೂರನೇ ಅಲೆಯಲ್ಲಿ ಕೋವಿಡ್ ಮರಣ ತಡೆಯಲು ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ 3,249 ಐಸಿಯು ಹಾಸಿಗೆಗಳನ್ನು ಅಳವಡಿಕೆ ಮಾಡಲಾಗುತ್ತಿದೆ.

ಜಿಲ್ಲಾ ಆಸ್ಪತ್ರೆಗಳಲ್ಲಿ 475 ಐಸಿಯು ಹಾಸಿಗೆಗಳು ಹಾಗೂ 1,015 ವೈದ್ಯಕೀಯ ಆಮ್ಲಜನಕ ಸಂಪರ್ಕ ಹೊಂದಿರುವ ಹಾಸಿಗೆಗಳನ್ನು ಹೊಸದಾಗಿ ವ್ಯವಸ್ಥೆ ಮಾಡಲಾಗುತ್ತದೆ. ತಾಲ್ಲೂಕಾ ಆಸ್ಪತ್ರೆಗಳಲ್ಲಿ 2,774 ಐಸಿಯು ಹಾಸಿಗೆ ಮತ್ತು 7,300 ವೈದ್ಯಕೀಯ ಆಮ್ಲಜನಕ ಸಂಪರ್ಕ ಹೊಂದಿರುವ ಹಾಸಿಗೆಗಳನ್ನು ಅಳವಡಿಕೆ ಮಾಡಲಾಗುತ್ತದೆ. ಮಕ್ಕಳಿಗಾಗಿಯೇ 3 ಸಾವಿರ ಹಾಸಿಗೆಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಮಕ್ಕಳ ವೆಂಟಿಲೇಟರ್‌ಗಳ ಸಂಖ್ಯೆಯನ್ನು ಸಾವಿರಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಇಲಾಖಾ ಮೂಲಗಳು ತಿಳಿಸಿವೆ.

***

ಕೋವಿಡ್ ನಿಯಮ ಪಾಲಿಸದಿದ್ದರೆ ಮೂರನೇ ಅಲೆ ಕಾಣಿಸಿಕೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಎಲ್ಲರಿಗೂ ಲಸಿಕೆ ಸಿಗುವವರೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು

- ಡಾ.ಕೆ.ವಿ. ತ್ರಿಲೋಕ ಚಂದ್ರ, ಆರೋಗ್ಯ ಇಲಾಖೆ ಆಯುಕ್ತ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT