ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಮಳೆ: ಸೇಡಂ ತತ್ತರ

ಆಳಂದ: ಹಳ್ಳದಲ್ಲಿ ಕೊಚ್ಚಿಹೋಗಿದ್ದ ಜೆಸ್ಕಾಂ ಸಹಾಯಕ ಎಂಜಿನಿಯರ್ ಶವವಾಗಿ ಪತ್ತೆ
Last Updated 18 ಸೆಪ್ಟೆಂಬರ್ 2020, 18:54 IST
ಅಕ್ಷರ ಗಾತ್ರ

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಕೆಲವೆಡೆ ಶುಕ್ರವಾರವೂ ಮಳೆ ಮುಂದುವರಿದಿದೆ. ಕಾಗಿಣಾ, ಭೀಮಾ ಹಾಗೂ ಕಮಲಾವತಿ ನದಿಗಳು ತುಂಬಿ ಹರಿಯುತ್ತಿವೆ. ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದೆ.

ಸೇಡಂ ಪಟ್ಟಣ ಸೇರಿದಂತೆ ಕಲಬುರ್ಗಿ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಎರಡು ಗಂಟೆ ಧಾರಾಕಾರ ಮಳೆ
ಯಾಗಿದೆ. ಸೇಡಂನಲ್ಲಿ ಮಳೆಯಿಂದಾಗಿ ಜನರು ತತ್ತರಿಸಿದ್ದಾರೆ. ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ಕೆಲ ಬಡಾವಣೆಗಳಿಗೆ ನೀರು ನುಗ್ಗಿದೆ.

ಆಳಂದ ತಾಲ್ಲೂಕಿನ ವೈಜಾಪುರ–ಬೊಮ್ಮನಹಳ್ಳಿ ಬಳಿಯ ಹಳ್ಳದಲ್ಲಿಗುರುವಾರ ರಾತ್ರಿ ಕೊಚ್ಚಿ ಹೋಗಿದ್ದ ಅಫಜಲಪುರ ಜೆಸ್ಕಾಂ ಸಹಾಯಕ ಎಂಜಿನಿಯರ್ ಸಿದ್ದರಾಮ ಅವಟೆ ಅವರ ಶವ ಹಳ್ಳದ ದಡದಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.

ಕಲಬುರ್ಗಿ– ಸೇಡಂ ಸಂಪರ್ಕಿಸುವ ಮಳಖೇಡ ಬಳಿಯ ಸೇತುವೆ ಮೇಲೆ ಕಾಗಿಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ. ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಬಳಿಯ ಸೇತುವೆ ಪೂರ್ಣ ಮುಳುಗಿದೆ.

ಅಫಜಲಪುರದ ಸೊನ್ನ ಭೀಮಾ ಬ್ಯಾರೇಜ್‌ನಿಂದ ಶುಕ್ರವಾರ 40 ಸಾವಿರ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಬಿಡಲಾಗುತ್ತಿದೆ. ಶುಕ್ರವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಚಿಂಚೋಳಿಯಲ್ಲಿ 17.8 ಸೆಂಟಿ ಮೀಟರ್, ಸೇಡಂನಲ್ಲಿ 13.3 ಸೆಂಟಿ ಮೀಟರ್ ಮಳೆ ಸುರಿದಿದೆ.

ರಾಯಚೂರು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಯರಗೇರಾ ಹೋಬಳಿ ವ್ಯಾಪ್ತಿಯಲ್ಲಿ 8.3 ಸೆಂ.ಮೀ. ಮಳೆ ದಾಖಲಾಗಿದೆ. ತಲಮಾರಿ ಗ್ರಾಮದಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿತು. ಯಾದಗಿರಿ ಜಿಲ್ಲೆಯಲ್ಲಿ ತುಂತುರು ಮಳೆಯಾಯಿತು. ಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಮಳೆ ಬಿಡುವು ನೀಡಿದೆ. ಎರಡು ದಿನ ಕಾಲ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ 61,773 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾಳಾಗಿದೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಯಿತು.ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲೂ ಮಳೆಯಾಯಿತು. ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ಭದ್ರಾ ಜಲಾಶ
ಯಕ್ಕೆ 4 ಸಾವಿರ ಕ್ಯುಸೆಕ್‌ ನೀರು ಹರಿದುಬರುತ್ತಿದೆ.

ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು, ಬಳ್ಳಾರಿ ಜಿಲ್ಲೆ ಹರಪನಹಳ್ಳಿಯಲ್ಲಿ ಸಾಧಾರಣ, ಕೊಡಗು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.

ಉಡುಪಿ ಜಿಲ್ಲೆಯ ವಿವಿಧೆಡೆ ಗುರುವಾರ ರಾತ್ರಿ ಮಳೆಯ ಅಬ್ಬರ ಜೋರಾಗಿತ್ತು. ಶುಕ್ರವಾರ ಮಳೆ ಕ್ಷೀಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT