ಮಂಗಳವಾರ, ಜೂನ್ 15, 2021
22 °C

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ: 13 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಬೆಳಗಾವಿ, ಬಳ್ಳಾರಿ, ವಿಜಯಪುರಗಳಲ್ಲಿ ಸಾಧಾರಣ ಹಾಗೂ ಹುಬ್ಬಳ್ಳಿ, ಗದಗ, ಬಾಗಲಕೋಟೆ, ಹೊಸಪೇಟೆಯಲ್ಲಿ ಧಾರಾಕಾರ ಮಳೆಯಾಗಿದೆ.

ಗದಗ ಜಿಲ್ಲೆಯ ಬೆಟಗೇರಿ, ನರೇಗಲ್‌, ಮುಂಡರಗಿ, ಶಿರಹಟ್ಟಿಗಳಲ್ಲಿ ಬಿರುಸಿನ ಮಳೆಯಾಗಿದೆ. ಹಂಪಿ ಸುತ್ತಮುತ್ತ, ಕಮಲಾಪುರಗಳಲ್ಲಿ ಗಂಟೆಗೂ ಹೆಚ್ಚು ಸಮಯ ಬಿರುಗಾಳಿ ಸಹಿತ ಮಳೆಯಾಗಿದೆ. ಹಾಸನ ನಗರ ಹಾಗೂ ವಿವಿಧೆಡೆ ಗುಡುಗು ಸಹಿತ ಸಾಧಾರಣ ಹಾಗೂ ಸಕಲೇಶಪುರ, ಬೇಲೂರು, ಆಲೂರು ತಾಲ್ಲೂಕುಗಳಲ್ಲಿ ತುಂತುರು ಮಳೆಯಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಮೊಳಕಾಲ್ಮುರು, ಚಳ್ಳಕೆರೆ, ಹೊಸದುರ್ಗ ತಾಲ್ಲೂಕುಗಳಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ ನಗರ, ಹೊನ್ನಾಳಿ, ಮಲೇಬೆನ್ನೂರಿನಲ್ಲಿ ಸಾಧಾರಣ ಮಳೆಯಾಗಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವಿವಿಧೆಡೆ ಸಾಧಾರಣ, ರಾಯಚೂರಿನಲ್ಲಿ ಕೆಲ ಹೊತ್ತು ತುಂತುರು ಮಳೆಯಾಯಿತು. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಹಲವೆಡೆ ಶುಕ್ರವಾರ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹದವಾದ ಮಳೆಯಾಗಿದೆ.

13 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’

ಬೆಂಗಳೂರು: ಹವಾಮಾನ ವೈಪರೀತ್ಯದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 25ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ 25ರವರೆಗೆ ವ್ಯಾಪಕ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಮೇ 22ರವರೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 26ರವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದರೂ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಳೆ–ಎಲ್ಲಿ, ಎಷ್ಟು?

ಕೋಲಾರದಲ್ಲಿ ಶುಕ್ರವಾರ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಭಟ್ಕಳ, ಸುಳ್ಯ, ಆನೇಕಲ್, ಭಾಗಮಂಡಲ, ಗೌರಿಬಿದನೂರು 3, ಕಾರವಾರ, ರಾಯಚೂರು, ಅಂಕೋಲಾ, ಕಾರ್ಕಳ, ಸಂಡೂರು, ಶ್ರೀರಂಗಪಟ್ಟಣ, ಬಂಗಾರಪೇಟೆ, ಬೆಂಗಳೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರ್ಗಿಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು