ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 21ರವರೆಗೆ ಭಾರಿ ಮಳೆಯ ಮುನ್ಸೂಚನೆ; 19 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’

ಮೇ 21ರವರೆಗೆ ಭಾರಿ ಮಳೆಯ ಮುನ್ಸೂಚನೆ
Last Updated 17 ಮೇ 2022, 3:42 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಒಳನಾಡು ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮೇ 17 ಮತ್ತು 18ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇಲ್ಮೈ ಸುಳಿಗಾಳಿಯು ಮಧ್ಯಪ್ರದೇಶದಿಂದ ಕರ್ನಾಟಕದ ಒಳನಾಡು ಮಾರ್ಗವಾಗಿ ತಮಿಳುನಾಡಿನತ್ತ ಚಲಿಸುತ್ತಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಗಾಳಿ ಬೀಸುವ ದಿಕ್ಕಿನ ಬದಲಾವಣೆ ಜತೆಗೆ ಲಕ್ಷದ್ವೀಪ ಭಾಗದಲ್ಲಿ ಮತ್ತೊಂದು ಸುಳಿಗಾಳಿ ಇರುವುದರಿಂದ ಕರಾವಳಿ ಜಿಲ್ಲೆಗಳಲ್ಲೂ ಇದೇ 21ರವರೆಗೆ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮೇ 18ಕ್ಕೆ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಒಂದು ದಿನ ‘ರೆಡ್ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದೂ ಇಲಾಖೆ ಎಚ್ಚರಿಸಿದೆ.

‘ಅಸನಿ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಕಳೆದ ವಾರದಿಂದ ಮಳೆ ಸುರಿಯಿತು. ಈಗ ಅದರ ಪ್ರಭಾವ ತಗ್ಗಿದೆ. ಮೇಲ್ಮೈ ಸುಳಿಗಾಳಿ ಹಾಗೂ ಹವಾಮಾನ ವೈಪರೀತ್ಯಗಳಿಂದ ಮಳೆ ಮುಂದುವರಿಯಲಿದೆ. ಸದ್ಯ ದಕ್ಷಿಣ ಅಂಡಮಾನ್ ಸಮುದ್ರ ಭಾಗದಲ್ಲಿ ಮುಂಗಾರು ಪ್ರವೇಶವಾಗಿದೆ. ರಾಜ್ಯಕ್ಕೆ ಮೇ ಅಂತ್ಯದೊಳಗೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

ರಾಜ್ಯದ ವಿವಿಧೆಡೆ ಉತ್ತಮ ಮಳೆ

ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿತ್ರದುರ್ಗ, ಮಂಗಳೂರು, ಬೀದರ್‌, ವಿಜಯನಗರ ಸೇರಿದಂತೆ ರಾಜ್ಯದ ವಿವಿಧೆಡೆ ಭಾನುವಾರ ರಾತ್ರಿ ಮತ್ತು ಸೋಮವಾರ ಬಿರುಸಿನ ಮಳೆಯಾಗಿದೆ. ಕೆಲವೆಡೆ ಮರಗಳು ಧರೆಗುರುಳಿವೆ. ಇನ್ನೂ ಕೆಲವೆಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ತುಮಕೂರ್ಲಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಿಡಿಲು ಬಡಿದು 153 ಕುರಿಗಳು ಹಾಗೂ ಒಂದು ಹಸು ಮೃತಪಟ್ಟಿವೆ.

ಶ್ರೀರಂಗಪಟ್ಟಣ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ವಿಷಕಂಠೇಗೌಡ ಅವರ ಪತ್ನಿ ನಾಗರತ್ನಮ್ಮ ಅವರ ಹೆಂಚಿನ ಮನೆಯ ಮೂರು ಗೋಡೆಗಳು ಕುಸಿದಿವೆ.

ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಹಸಿಮೆಣಸು ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಗಾಳಿ ಮಳೆಗೆ ಕಾಫಿ ತೋಟಗಳಲ್ಲಿ ಮರಗಳು ಬಿದ್ದು ಹಾನಿಯಾಗಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ಹಾಗೂ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಅಲ್ಲಲ್ಲಿ ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬುಧವಾರ (ಮೇ 18) ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ ಮೂರ್ನಾಲ್ಕು ದಿನ ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗಾಂಧಿ ಘರ್‌ ಗ್ರಾಮದ ಸಮೀಪ ಹೆದ್ದಾರಿ ಬದಿಯ ಮರವೊಂದು ಉರುಳಿ ಬಿದ್ದು, ಎರಡು ಗಂಟೆ ಸಂಚಾರಕ್ಕೆ ಅಡಚಣೆಯಾಗಿತ್ತು. ಬಾಳೆಹೊನ್ನೂರು ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಆಲ್ದೂರು ಪಟ್ಟಣದ ವಾಹನ ನಿಲುಗಡೆ ಪ್ರದೇಶದಲ್ಲಿ ನೀರು ಹರಿಯಿತು. ಗಿರಿಶ್ರೇಣಿ, ಕಳಸ ಭಾಗದಲ್ಲಿ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT