ಜಾತಿಗೊಂದು ನಿಗಮ: ಹೈಕೋರ್ಟ್ ನೋಟಿಸ್

ಬೆಂಗಳೂರು: ಜಾತಿ ಆಧಾರದಲ್ಲಿ ನಿಗಮ ಮಂಡಳಿಗಳನ್ನು ಸ್ಥಾಪಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.
ಮರಾಠಾ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮತ್ತು ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆ ಪ್ರಶ್ನಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಪ್ರತಿವಾದಿ ಆಗಿರುವ ಮರಾಠಾ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮತ್ತು ಆರ್ಯವೈಶ್ಯ ಅಭಿವೃದ್ಧಿ ನಿಗಮಕ್ಕೂ ಇದೇ ವೇಳೆ ನೋಟಿಸ್ ಜಾರಿ ಮಾಡಿತು. ‘ಈ ವಿಷಯದಲ್ಲಿ ಸರ್ಕಾರ ಕೈಗೊಳ್ಳುವ ಮುಂದಿನ ಕ್ರಮಗಳು ನ್ಯಾಯಾಲಯ ಹೊರಡಿಸುವ ಅಂತಿಮ ತೀರ್ಪಿಗೆ ಒಳಪಟ್ಟಿದೆ’ ಎಂದು ಸ್ಪಷ್ಟಪಡಿಸಿತು.
‘ಜಾತಿ ಆಧಾರದ ಮೇಲೆ ನಿಗಮ– ಮಂಡಳಿ ಸ್ಥಾಪಿಸುವುದು ಜನರ ಮಧ್ಯ ತಾರತಮ್ಯ ಮೂಡಿಸುತ್ತದೆ. ಒಂದು ನಿರ್ದಿಷ್ಟ ಜಾತಿಗೆ ಲಾಭ ಮಾಡಿಕೊಟ್ಟು, ಉಳಿದ ಜಾತಿಗಳ ಜನರಿಗೆ ಅನ್ಯಾಯ ಮಾಡಿದಂತೆ ಆಗಲಿದೆ. ಈ ಕ್ರಮವು ಸಂವಿಧಾನದ ಪರಿಚ್ಛೇದ 14 ಮತ್ತು 15(1)ಕ್ಕೆ ವಿರುದ್ಧವಾಗಿದೆ. ಈ ನಿಗಮಗಳ ಸ್ಥಾಪನೆ ಸಂವಿಧಾನ ಬಾಹಿರ’ ಎಂದು ಘೋಷಿಸಬೇಕು ಎಂದು ಕೋರಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.