ಸೋಮವಾರ, ಮೇ 10, 2021
19 °C

ಬೆಳೆವಿಮೆ: ಪ್ರಚಾರ ನೀಡಲು ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಬೆಳೆ ವಿಮೆ ಯೋಜನೆ ಮತ್ತು ಅದರ ಲಾಭಗಳ ಬಗ್ಗೆ ರೈತರಿಗೆ ತಿಳಿವಳಿಕೆ ಇಲ್ಲದಿರಬಹುದು. ಹೀಗಾಗಿ, ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಪ್ರಚಾರ ನೀಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರೈತರ ಆತ್ಮಹತ್ಯೆ ಮತ್ತು ಬೆಳೆ ವಿಮಾ ಯೋಜನೆ ಅನುಷ್ಠಾನದ ಕುರಿತು ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಜ್ಯ ಮತ್ತು ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಗಳ ಬಗ್ಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್‌ ಪರಿಶೀಲಿಸಿದ ಪೀಠ, ‘ಆಗಾಗ್ಗೆ ಸಭೆಗಳನ್ನು ನಡೆಸಿಲ್ಲ’ ಎಂದು ಅಭಿಪ್ರಾಯಪಟ್ಟಿತು.

‘2019ರ ಮಾ.16ರಂದು ಯಾದಗಿರಿ ಜಿಲ್ಲೆಯಲ್ಲಿ ಕೊನೆಯ ಸಭೆ ನಡೆದಿದೆ. ಸಭೆಯ ನಡಾವಳಿ ಗಮನಿಸಿದರೆ ಅದು ಕೂಡ ಹಳ್ಳಿಯಲ್ಲಿ ನಡೆದಿಲ್ಲ. 2021ರ ಜನವರಿ ಮತ್ತು ಫೆಬ್ರುವರಿಯಲ್ಲಿ ಬಂದಿರುವ ದೂರುಗಳನ್ನೇ ಕುಂದು–ಕೊರತೆ ಅರ್ಜಿಗಳೆಂದು ಪರಿಗಣಿಸಿ’ ಎಂದು ಯಾದಗರಿ ಜಿಲ್ಲಾ ಸಮಿತಿಗೆ ನಿರ್ದೇಶನ ನೀಡಿತು. ‘ಯಾವುದೇ ರೈತರು ಬೆಳೆ ವಿಮೆ ಯೋಜನೆಯ ಪ್ರಯೋಜನದಿಂದ ವಂಚಿತರಾಗಿದ್ದಾರೆಯೇ ಎಂಬುದನ್ನು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಲು ಅಧಿಕಾರಿಗಳನ್ನು ನಿಯೋಜಿಸಬೇಕು’ ಎಂದು ತಿಳಿಸಿತು.

‘ಕೈ ಸಾಲ ಪಡೆದು ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ವಿಷಯದಲ್ಲಿ ನಿರ್ಧಾರ ಕೈಗೊಳ್ಳಲು ಸಮಯಾವಕಾಶ ಬೇಕು. ಉಪಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಈಗ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ’ ಎಂದು ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು