ಬೆಂಗಳೂರು: ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಸರಿಯಾಗಿ ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಲಭ್ಯವಾಗಿರುವ ಜೀವಿಸುವ ಹಕ್ಕು ಮತ್ತು ಆಹಾರ ಭದ್ರತಾ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಹೈಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.
ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಕೊರೊನಾ ಸೋಂಕು ಹರಡುತ್ತಿದ್ದ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಿರುವುದಕ್ಕೆ
ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಈ ಯೋಜನೆಯಲ್ಲಿ ಎಂಟನೇ ತರಗತಿವರೆಗಿನ 6ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಪೂರೈಸಲಾಗುತ್ತಿತ್ತು. ಕೋವಿಡ್ ಕಾರಣದಿಂದ ಶಾಲೆಗಳು ಮುಚ್ಚಿವೆ. ಈ ಕಾರಣದಿಂದ ಮೇ 31ರಿಂದ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿಲ್ಲ ಎಂಬುದನ್ನು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿಯಮಗಳ ಪ್ರಕಾರ ರಾಜ್ಯ ಸರ್ಕಾರದ ಫಲಾನುಭವಿ ಮಕ್ಕಳಿಗೆ ಪರಿಹಾರ ನೀಡಬೇಕು’ ಎಂದು ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ರೊಸಾರಿಯೊ ಒತ್ತಾಯಿಸಿದರು.
ಪ್ರಮಾಣಪತ್ರ ಸಲ್ಲಿಸಲು ನಿರ್ದೇಶನ: ಸಾರ್ವಜನಿಕ ಶಿಕ್ಷಣ ಇಲಾಖೆಯು ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ವಿಫಲವಾಗಿರುವುದು ಮಕ್ಕಳ ಹಕ್ಕುಗಳ ಉಲ್ಲಂಘನೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಈ ಸಂಬಂಧ ವೈಯಕ್ತಿಕವಾಗಿ ನವೆಂಬರ್ 17ರೊಳಗೆ ಪ್ರಮಾಣಪತ್ರ ಸಲ್ಲಿಸುವಂತೆ ಇಲಾಖೆಯ ಕಾರ್ಯದರ್ಶಿಗೆ ನಿರ್ದೇಶನ ನೀಡಿತು.
ಯೋಜನೆಯ ಅನುಷ್ಠಾನಕ್ಕೆ ಕೈಗೊಳ್ಳುವ ಕ್ರಮಗಳು ಮತ್ತು ಸ್ಥಗಿತಗೊಂಡ ಅವಧಿಗೆ ಸಂಬಂಧಿಸಿದಂತೆ ಮಕ್ಕಳಿಗೆ ನೀಡುವ ಪರಿಹಾರದ ಕುರಿತು ಪ್ರಮಾಣಪತ್ರದಲ್ಲಿ ಸ್ಪಷ್ಟವಾಗಿ ಮಾಹಿತಿ ಒದಗಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿತು.
‘ಪ್ರತಿ ವಿದ್ಯಾರ್ಥಿಗೂ ಎಷ್ಟು ದಿನಗಳ ಒಳಗಾಗಿ, ಯಾವ ರೀತಿಯಲ್ಲಿ ಪರಿಹಾರ ನೀಡಲಾಗುತ್ತದೆ ಎಂಬುದನ್ನು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಪ್ರಮಾಣಪತ್ರದಲ್ಲಿ ತಿಳಿಸಬೇಕು. ಯೋಜನೆಯ ಆರಂಭಕ್ಕೆ ಯಾವ ಕ್ರಮ ಕೈಗೊಳ್ಳಲಾಗುವುದು? ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ಒದಗಿಸಲಾಗುವುದೇ? ಅಥವಾ ಆಹಾರ ಧಾನ್ಯ ವಿತರಿಸಲಾಗುತ್ತದೆಯೆ? ಎಂಬುದನ್ನೂ ಸ್ಪಷ್ಟವಾಗಿ ತಿಳಿಸಬೇಕು’ ಎಂದು ನಿರ್ದೇಶಿಸಿತು.
ಅಂಗನವಾಡಿಗಳು ಇನ್ನೂ ಆರಂಭವಾಗಿಲ್ಲ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಅಡಿಯಲ್ಲಿ ಸಣ್ಣ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸಲಾಗುತ್ತಿತ್ತು. ಇನ್ನು ಯಾವ ರೀತಿಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂಬುದರ ಕುರಿತು ಸಂಬಂಧಿಸಿದ ಇಲಾಖೆಯ ಕಾರ್ಯದರ್ಶಿಯೂ ಪ್ರಮಾಣಪತ್ರ ಸಲ್ಲಿಸಬೇಕು ಎಂದಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.