ಭಾನುವಾರ, ಜನವರಿ 16, 2022
28 °C
ಡಿ.30ರೊಳಗೆ ಪ್ರಕ್ರಿಯೆ ಮುಗಿಸುವಂತೆ ಸೂಚನೆ

ಬಾಕಿಯಿರುವ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅವಧಿ ಮುಗಿದು ಚುನಾವಣೆ ಬಾಕಿ ಇರುವ ರಾಜ್ಯದ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಇದೇ ಡಿಸೆಂಬರ್ 30ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ವಾದ ಆಲಿಸಿದ ನ್ಯಾಯಪೀಠ, ‘ಇದೇ 26ರೊಳಗೆ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ಅಧಿಸೂಚನೆ ಹೊರಡಿಸಬೇಕು. ನಂತರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಬೇಕು. ಡಿಸೆಂಬರ್ 30ರೊಳಗೆ ಚುನಾವಣೆ ನಡೆಸಬೇಕು’ ಎಂದು ಆದೇಶಿಸಿದೆ.

ಇದೇ ವೇಳೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯವರ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

2021ರ ಸೆಪ್ಟೆಂಬರ್ 16ರಂದು ಹೈಕೋರ್ಟ್ ನೀಡಿದ ಆದೇಶದಂತೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ನಡೆಸಲಾಗಿದೆ. 56 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 10 ನಗರ ಸ್ಥಳೀಯ ಸಂಸ್ಥೆಗಳ ಅಂತಿಮ ಮೀಸಲಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಉಳಿದ 46 ಸ್ಥಳೀಯ ಸಂಸ್ಥೆಗಳಿಗೆ ಕರಡು ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿದೆ. ಮುಂದಿನ ಏಳು ಕೆಲಸದ ದಿನಗಳಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ‘ಸರ್ಕಾರ ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದರೆ ಏಕಕಾಲಕ್ಕೆ ಚುನಾವಣೆ ನಡೆಸಲು ಅನುಕೂಲವಾಗುತ್ತದೆ. ಸರ್ಕಾರ ಮೀಸಲಾತಿ ಅಧಿಸೂಚನೆ ಹೊರಡಿಸಿದ ನಂತರ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿ ಡಿಸೆಂಬರ್ ಅಂತ್ಯದೊಳಗೆ ಚುನಾವಣಾ ಪ್ರಕ್ರಿಯೆ ಮುಗಿಸಲಾಗುವುದು’ ಎಂದು ಸಂಭಾವ್ಯ ವೇಳಾಪಟ್ಟಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಬೆಳಗಿನ ಕಲಾಪದಲ್ಲಿ ನ್ಯಾಯಪೀಠ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪರಿಣಾಮ ಮಧ್ಯಾಹ್ನದ ಕಲಾಪಕ್ಕೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಖುದ್ದು ಹಾಜರಾಗಿದ್ದರು. ವಿಚಾರಣೆಯನ್ನು 2022ರ ಜನವರಿಗೆ ಮುಂದೂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು