ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಶಾನಕ್ಕೆ ಜಾಗ: ಜಿಲ್ಲಾಧಿಕಾರಿಗಳಿಗೆ ಜೈಲಿಗಟ್ಟುವ ಎಚ್ಚರಿಕೆ ನೀಡಿದ ಹೈಕೋರ್ಟ್

Last Updated 9 ಮಾರ್ಚ್ 2023, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಾದ್ಯಂತ ಎರಡು ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಕಲ್ಪಿಸಬೇಕಿರುವ ರಾಜ್ಯ ಸರ್ಕಾರ, 319 ಗ್ರಾಮಗಳಿಗಷ್ಟೇ ಸ್ಮಶಾನ ಜಾಗ ಒದಗಿಸಬೇಕಿದೆ’ ಎಂಬ ತಪ್ಪು ಮಾಹಿತಿ ನೀಡಿದ ಕಾರಣಕ್ಕೆ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

‘ಹೈಕೋರ್ಟ್‌ಗೆ ತಪ್ಪು ಮಾಹಿತಿ ನೀಡಿರುವ ಎಲ್ಲಾ ಜಿಲ್ಲಾಧಿಕಾರಿಗಳು ಇದೇ 16ರಂದು ವಿಚಾರಣೆಗೆ ಖುದ್ದು ಹಾಜರಾಗಬೇಕು. ತಪ್ಪು ಮಾಹಿತಿ ನೀಡುವ ಮೂಲಕ ನ್ಯಾಯಾಲಯಕ್ಕೆ ವಂಚಿಸಿರುವ ಜಿಲ್ಲಾಧಿಕಾರಿಗಳನ್ನು ಜೈಲಿಗೆ ಕಳುಹಿಸಲಾಗುವುದು’ ಎಂದು ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಕಠಿಣ ಎಚ್ಚರಿಕೆ ನೀಡಿದೆ.

‘ರಾಜ್ಯದಾದ್ಯಂತ ಗ್ರಾಮಗಳಲ್ಲಿ ಸ್ಮಶಾನಕ್ಕೆ ಅಗತ್ಯ ಜಮೀನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಮೊಹಮದ್ ಇಕ್ಬಾಲ್ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲಾಯಿತು.

ವಿಚಾರಣೆ ವೇಳೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲರು, ‘ಸರ್ಕಾರದ ಅಂಕಿ-ಅಂಶಗಳಿಗೂ ಮತ್ತು ಪ್ರಾಧಿಕಾರ ಸಂಗ್ರಹಿಸಿರುವ ಮಾಹಿತಿಗೂ ವ್ಯತ್ಯಾಸವಿದೆ. ರಾಜ್ಯದಲ್ಲಿ ಇನ್ನೂ 2,041 ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಒದಗಿಸಬೇಕಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ‘ಈ ವಿಷಯದಲ್ಲಿ ಕೆಲ ಜಿಲ್ಲಾಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ’ ಎಂದರು.

ಇದಕ್ಕೆ ಕೆರಳಿದ ನ್ಯಾಯಪೀಠ, ‘ಸ್ಮಶಾನವಿಲ್ಲದ ಕಡೆ ಜಮೀನು ಒದಗಿಸುವಂತೆ ಹೈಕೋರ್ಟ್ ಆದೇಶ ನೀಡಿ ಮೂರೂವರೆ ವರ್ಷ ಕಳೆದಿದ್ದರೂ, ಸ್ಮಶಾನಕ್ಕೆ ಜಾಗ ಒದಗಿಸಲು ಈಗಲೂ ಸರ್ಕಾರ ಒದ್ದಾಡುತ್ತಿದೆ. ಜಿಲ್ಲಾಧಿಕಾರಿಗಳು ಸುಳ್ಳು ಮಾಹಿತಿ ಒದಗಿಸಿ ನ್ಯಾಯಾಲಯ, ಅರ್ಜಿದಾರರು ಮತ್ತು ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ. ಇದು ತ್ರೀ ಇನ್ ಒನ್ ಮೋಸ’ ಎಂದು ಕಿಡಿ ಕಾರಿತು. ‘ಇಂತಹ ಅಧಿಕಾರಿಗಳು ಹೈಕೋರ್ಟ್ ಆದೇಶಕ್ಕೆ ಅಗೌರವ ತೋರುತ್ತಿದ್ದಾರೆ. ಹೀಗಾಗಿ, ಆರೋಪಿಗಳಾದ ಸರ್ಕಾರಿ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ದೋಷಾರೋಪ ಹೊರಿಸುವುದನ್ನು ಬಿಟ್ಟು ನಮಗೆ ಅನ್ಯ ಮಾರ್ಗವಿಲ್ಲ’ ಎಂದು ನುಡಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT