ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಪ್ರವೇಶ ನಿರ್ಬಂಧ ಪ್ರಶ್ನಿಸಿದ ಹೈಕೋರ್ಟ್

Last Updated 9 ಮಾರ್ಚ್ 2021, 20:29 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದ ಗಡಿಯಲ್ಲಿ ಯಾವ ಕಾನೂನಿನ ಅಡಿ ಪ್ರವೇಶ ನಿರ್ಬಂಧ ಮಾಡಲಾಗಿದೆ ಎಂದು ಜಿಲ್ಲಾಡಳಿತವನ್ನು ಹೈಕೋರ್ಟ್ ಪ್ರಶ್ನೆ ಮಾಡಿದೆ.‌

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಆದೇಶ ಪ್ರಶ್ನಿಸಿ ವಕೀಲ ಬಿ.ಸುಬ್ಬಯ್ಯ ರೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಲು 23 ಕಡೆ ಅವಕಾಶ ಇದೆ. ಆದರೆ, ನಾಲ್ಕು ಕಡೆಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಪ್ರತಿನಿತ್ಯ 80 ಸಾವಿರಕ್ಕೂ ಹೆಚ್ಚು ಜನರು ಆಸ್ಪತ್ರೆ, ವ್ಯಾಪಾರ ವಹಿವಾಟು ಇನ್ನಿತರ ಕಾರಣಕ್ಕೆ ಗಡಿ ದಾಟಬೇಕಾದ ಅನಿವಾರ್ಯ ಇದೆ’ ಎಂದು ಅರ್ಜಿದಾರರು ದೂರಿದ್ದಾರೆ.

‘ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಬಹುದಾದ ಜಿಲ್ಲೆಗಳ ಸಂಖ್ಯೆ ಎಷ್ಟು, ಬೇರೆ ಜಿಲ್ಲೆಗಳಿಂದ ಕೇರಳದ ನಿವಾಸಿಗಳು ಕರ್ನಾಟಕ ಪ್ರವೇಶಿಸಬಹುದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾತ್ರ ಪ್ರವೇಶಿಸುವಂತಿಲ್ಲವೇ’ ಎಂದು ಮೌಖಿಕವಾಗಿ ಕೇಳಿತು.

‘ರಾಜ್ಯ ಸರ್ಕಾರದ 2021 ಫೆಬ್ರುವರಿ 16ರ ಸುತ್ತೋಲೆ ಪ್ರಕಾರ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಕೇಳಬಹುದು. ವರದಿ ಇದ್ದರೂ ಪ್ರವೇಶಕ್ಕೆ ನಿರ್ಬಂಧ ಹೇರುವಂತಿಲ್ಲ. ಪ್ರವೇಶ ದ್ವಾರಗಳನ್ನು ಮುಚ್ಚಲು ಸುತ್ತೋಲೆಯಲ್ಲಿ ತಿಳಿಸಲಾಗಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.

ಅರ್ಜಿದಾರರು ಎತ್ತಿರುವ ಕಾನೂನು ಸಮಸ್ಯೆಗಳನ್ನು ಜಿಲ್ಲಾಡಳಿತ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ ಪೀಠ, ಮಾ.18ಕ್ಕೆ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT