ಶನಿವಾರ, ಮೇ 21, 2022
23 °C
ದಾಲ್ಮಿಯಾ ಸಿಮೆಂಟ್‌ ಕಂಪನಿ ಮಾಲಿನ್ಯ ಆರೋಪ

ಸ್ಥಳ ಪರಿಶೀಲನೆಗೆ ಹೈಕೋರ್ಟ್‌ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ’ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಪರಿಸರ ಮಾಲಿನ್ಯ ಹಾಗೂ ಆರೋಗ್ಯ ಸಮಸ್ಯೆ ಉಂಟಾಗುತ್ತಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪರಿಸರ ಅಧಿಕಾರಿಯಿಂದ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿ‘ ಎಂದು ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಯಾದವಾಡ ಗ್ರಾಮ ಪಂಚಾಯಿತಿ ಸದಸ್ಯ ಕಲಮೇಶ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. 

ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಪರಿಸರ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಬೆಳಗಾವಿ ಜಿಲ್ಲಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಸಿಇಒ, ಮೂಡಲಗಿ ತಹಶೀಲ್ದಾರ್, ಯಾದವಾಡ ಗ್ರಾ.ಪಂ ಪಿಡಿಒ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ. 

’ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ವಾಯು–ಜಲ ಮಾಲಿನ್ಯ ಉಂಟಾಗುತ್ತಿದೆಯೇ, ಕಾರ್ಖಾನೆಯು, ಪರಿಸರ ಸೇರಿದಂತೆ ಇತರೆ ಅಗತ್ಯ ಪರವಾನಗಿ ಪಡೆದಿದೆಯೇ, ಅನುಮತಿಸಿದ ವ್ಯಾಪ್ತಿ ಪ್ರದೇಶದಲ್ಲಿಯೇ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದೆಯೇ ಎಂಬ ಅಂಶಗಳನ್ನು ಆಧರಿಸಿ ಸ್ಥಳೀಯ ಪರಿಸರ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು‘ ಎಂದು ಕೆಎಸ್‌ಪಿಸಿಬಿಗೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಫೆಬ್ರುವರಿ 15ಕ್ಕೆ ಮುಂದೂಡಿದೆ.

ಆಕ್ಷೇಪವೇನು?: ’ಕಾರ್ಖಾನೆಯ ಚಟುವಟಿಕೆಗಳ ವಿರುದ್ಧ ಸ್ಥಳೀಯ ಗ್ರಾ.ಪಂ ನಿರ್ಣಯ ಅಂಗೀಕರಿಸಿದೆ. ಗ್ರಾಮಸ್ಥರು ಇದರ ವಿರುದ್ಧ ಮನವಿಯನ್ನೂ ಸಲ್ಲಿಸಿದ್ದಾರೆ. ಆದರೂ, ಸರ್ಕಾರ ಮತ್ತು ಜಿಲ್ಲಾಡಳಿತ ಕಂಪನಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ‘ ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು