ಶನಿವಾರ, ಸೆಪ್ಟೆಂಬರ್ 25, 2021
22 °C

ಶಾಲಾ ಸಿಬ್ಬಂದಿಗೆ ಲಸಿಕೆ: ವಿವರ ಕೇಳಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್ ಲಸಿಕೆ ಹಾಕುವ ಕುರಿತು ಜಿಲ್ಲಾವಾರು ಮಾಹಿತಿ ದಾಖಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಶಾಲೆಗಳನ್ನು ಪ್ರಾರಂಭಿಸುವ ವಿಷಯದಲ್ಲಿ ಸರ್ಕಾರ ಕೈಗೊಂಡಿರುವ ನಿರ್ಧಾರಗಳ ಬಗ್ಗೆ ಯಾವುದೇ ನಿರ್ದೇಶನ ನೀಡುವುದಿಲ್ಲ ಎಂದು ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.

ಶಾಲೆ ಮತ್ತು ಅಂಗನವಾಡಿಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭಿಸುವಂತೆ ಕೋರಿ ಎಂ. ರಾಧಾ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ‘ಲಸಿಕೆಯು ಸಿಬ್ಬಂದಿಯಲ್ಲಿ ಆತ್ಮವಿಶ್ವಾಸ ಹೆಚ್ಚಿಸಲಿದೆ’ ಎಂದರು.

ವಿಶೇಷ ಸಮಿತಿಯ ಶಿಫಾರಸುಗಳನ್ನು ಆಧರಿಸಿ ರಾಜ್ಯದಲ್ಲಿ ಶಾಲೆಗಳನ್ನು ಪುನರ್ ಆರಂಭಿಸುವ ಬಗ್ಗೆ ತೆಗೆದುಕೊಂಡ ನಿರ್ಧಾರ ಪರಿಶೀಲಿಸಿದ ಪೀಠ, ‘ಪರಿಸ್ಥಿತಿ ಈಗ ವೇಗವಾಗಿ ಬದಲಾಗುತ್ತಿದೆ. ಒಂದು ವಾರದ ಹಿಂದೆ ಸಮಿತಿ ನೀಡಿದ್ದ ಶಿಫಾರಸು ಸದ್ಯದ ಪರಿಸ್ಥಿತಿಗೆ ಸರಿ ಹೊಂದುವುದಿಲ್ಲ’ ಎಂದು ಅಭಿಪ್ರಾಯಪಟ್ಟಿತು.

‘ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. 3ನೇ ಅಲೆಯ ಬಗ್ಗೆ ವರದಿಗಳು ಪ್ರಕಟವಾಗುತ್ತಿವೆ. ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆದರೆ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಲಾರರು. ಸರ್ಕಾರ ತಗೆದುಕೊಂಡಿರುವ ನಿರ್ಧಾರ ಅನೌಪಚಾರಿಕ ಆಗಿರುವುದರಿಂದ ಈ ವಿಷಯದಲ್ಲಿ ಯಾವುದೇ ನಿರ್ದೇಶನಗಳನ್ನು ನೀಡುವುದಿಲ್ಲ’ ಎಂದು ಪೀಠ ಹೇಳಿತು.

ಶಾಲೆಗಳ ಮರು ಆರಂಭದ ಬಗ್ಗೆ ದಾಖಲೆ ಸಲ್ಲಿಸಲು ಹೆಚ್ಚಿನ ಸಮಯ ಬೇಕು ಎಂದು ಸರ್ಕಾರದ ಪರ ವಕೀಲರು ಕೋರಿದರು. ಅನುಮತಿ ನೀಡಿದ ಪೀಠ, ವಿಚಾರಣೆ ಮುಂದೂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು