ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಕುಟುಂಬಗಳಿಗೆ ನೆರವು: ಸರ್ಕಾರದ ಪ್ರಮಾಣಪತ್ರಕ್ಕೆ ಹೈಕೋರ್ಟ್‌ ಆಘಾತ

Last Updated 3 ಮಾರ್ಚ್ 2021, 1:02 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕ್‌ಗಳಿಂದ ಸಾಲ ಪಡೆದು ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಕೃಷಿ ಇಲಾಖೆ ಆಯುಕ್ತರು ಸಲ್ಲಿಸಿರುವ ಪ್ರಮಾಣಪತ್ರಕ್ಕೆ ಹೈಕೋರ್ಟ್‌ ಮಂಗಳವಾರ ಆಘಾತ ವ್ಯಕ್ತಪಡಿಸಿದೆ.

ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು, ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳನ್ನು ಸರ್ಕಾರದ ನೆರವು ಯೋಜನೆಯಿಂದ ಹೊರಗಿಡಲಾಗುವುದೇ ಎಂಬುದರ ಖಚಿತವಾದ ನಿಲುವನ್ನು ತಿಳಿಸುವಂತೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ರೈತರ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವುದಕ್ಕೆ ಸಂಬಂಧಿಸಿದಂತೆ ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯುತ್ತಿದೆ. ಈ ಕುರಿತು ವಿಸ್ತೃತವಾದ ಪ್ರಮಾಣಪತ್ರ ಸಲ್ಲಿಸುವಂತೆ ನ್ಯಾಯಾಲಯ ಹಿಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಕೃಷಿ ಇಲಾಖೆ ಆಯುಕ್ತರು ಸಲ್ಲಿಸಿದ್ದ ಪ್ರಮಾಣ ಪತ್ರವನ್ನು ಪೀಠ ಮಂಗಳವಾರದ ವಿಚಾರಣೆ ವೇಳೆ ಪರಿಶೀಲಿಸಿತು.

‘ಶಹಾಪುರ ತಾಲ್ಲೂಕಿನಲ್ಲಿ 2016ರಿಂದ 2020–21ರವರೆಗೆ 125 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ₹ 5 ಲಕ್ಷ ನಗದು ವಿತರಣೆ ಸೇರಿದಂತೆ ಕೆಲವು ನೆರವನ್ನು ಸಂತ್ರಸ್ತ ಕುಟುಂಬಗಳಿಗೆ ನೀಡಲಾಗುತ್ತಿದೆ. ಶಹಾಪುರ ತಾಲ್ಲೂಕಿನ 125 ರೈತರ ಪೈಕಿ 105 ರೈತರ ಕುಟುಂಬಗಳು ಮಾತ್ರ ಈ ಪರಿಹಾರ ಪಡೆಯಲು ಅರ್ಹವಾಗಿವೆ’ ಎಂದು ಕೃಷಿ ಇಲಾಖೆ ಆಯುಕ್ತರು ಪ್ರಮಾಣ ಪತ್ರದಲ್ಲಿ ತಿಳಿಸಿದ್ದರು.

ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನೆರವು ನೀಡುವ ಸಂಬಂಧ 2015 ರಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರ ಪ್ರಕಾರ, ಬ್ಯಾಂಕ್‌ಗಳು ಮತ್ತು ಪತ್ತಿನ ಸಹಕಾರ ಸಂಘಗಳಿಂದ ಸಾಲ ಪಡೆದಿರುವ ರೈತರ ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಬಹುದು. ಖಾಸಗಿ ಲೇವಾದೇವಿದಾರರ ಮೇಲೆ ರಾಜ್ಯ ಸರ್ಕಾರಕ್ಕೆ ಯಾವುದೇ ನಿಯಂತ್ರಣವಿಲ್ಲ. ರೈತರು ಅವರ ಬಳಿ ಸಾಲ ಪಡೆಯದಂತೆ ತಡೆಯುವುದಕ್ಕೂ ಸಾಧ್ಯವಿಲ್ಲ ಎಂದು ಪ್ರಮಾಣಪತ್ರದಲ್ಲಿ ಮಾಹಿತಿ ನೀಡಿದ್ದರು.

‘ರಾಜ್ಯ ಸರ್ಕಾರವೇ ರೈತರನ್ನು ಕೃತಕವಾಗಿ ಎರಡು ವರ್ಗಗಳಾಗಿ ವಿಂಗಡಿಸಿದೆ. ಈ ರೀತಿಯ ವರ್ಗೀಕರಣವು ಸಂವಿಧಾನದ 14ನೇ ವಿಧಿಗೆ ವಿರುದ್ಧವಾಗಿದೆ ಎಂಬುದು ಮೇಲ್ನೋಟಕ್ಕೆ ಗೋಚರಿಸುತ್ತದೆ. ಇಂತಹ ವರ್ಗೀಕರಣವನ್ನು ಒಪ್ಪಿಕೊಳ್ಳುವುದು ಅಸಾಧ್ಯ. ರೈತರು ಸಾಲ ಮರುಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಕಳವಳವಿದೆ’ ಎಂದು ನ್ಯಾಯಪೀಠ ವಿಚಾರಣೆ ವೇಳೆ ಹೇಳಿತು.

ಕೃಷಿ ಇಲಾಖೆ ಆಯುಕ್ತರ ಪ್ರಮಾಣಪತ್ರವನ್ನು ಪರಿಶೀಲಿಸಿ ಮೂರು ವಾರಗಳೊಳಗೆ ಹೊಸದಾಗಿ ಪ್ರಮಾಣಪತ್ರ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದ ಪೀಠ, ‘ಮುಖ್ಯ ಕಾರ್ಯದರ್ಶಿಯು ವಿಷಯದ ಗಂಭೀರತೆಯನ್ನು ಅರಿತು ಪ್ರಮಾಣಪತ್ರ ಸಲ್ಲಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಒಂದೇ ತಾಲ್ಲೂಕಿನಲ್ಲಿ ಐದು ವರ್ಷಗಳ ಅವಧಿಯಲ್ಲಿ 125 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ರೈತರು ಏಕೆ ಖಾಸಗಿ ಲೇವಾದೇವಿದಾರರ ಬಳಿ ಸಾಲ ಪಡೆಯಲು ಹೋಗಬೇಕಾದ ಅನಿವಾರ್ಯತೆ ಇದೆ ಎಂಬುದನ್ನೂ ಪರಿಶೀಲಿಸಿ ಮುಖ್ಯ ಕಾರ್ಯದರ್ಶಿ ಪ್ರತಿಕ್ರಿಯಿಸುತ್ತಾರೆ ಎಂಬ ನಿರೀಕ್ಷೆ ಇದೆ’ ಎಂದು ತಿಳಿಸಿತು.

ಶಹಾಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಜತೆಯಲ್ಲೇ ರಾಜ್ಯದ ಇತರ ಜಿಲ್ಲೆಗಳ ವಿಷಯವನ್ನೂ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. ರೈತರಿಗೆ ಬೆಳೆ ವಿಮೆ ಸರಿಯಾಗಿ ಪಾವತಿಯಾಗದೇ ಇರುವ ವಿಷಯವನ್ನೂ ಅರ್ಜಿದಾರರು ಪ್ರಶ್ನಿಸಿದ್ದಾರೆ. ಎರಡು ದಶಕಗಳ ಅವಧಿಯಲ್ಲಿ ರಾಜ್ಯದಲ್ಲಿ 20,000 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಮಾಹಾರಾ ಮತ್ತು ಗುಜರಾತ್‌ನ ನಂತರದ ಸ್ಥಾನದಲ್ಲಿ ಕರ್ನಾಟಕ ಇದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT