ಬುಧವಾರ, ಜೂನ್ 29, 2022
26 °C
ಕಾಲೇಜಿಗೆ ಬಂದು ವಾಪಸಾದ ವಿದ್ಯಾರ್ಥಿನಿಯರು

ಮಂಗಳೂರು ವಿ.ವಿ: ‘ಹಿಜಾಬ್ ಧರಿಸಿದವರಿಗೆ ಪ್ರವೇಶ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ ನಗರದ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಶನಿವಾರ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ವಾಪಸ್ ಕಳುಹಿಸಲಾಯಿತು.

ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯ ನಿರ್ಣಯದಂತೆ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ. ಕೆಲವು ವಿದ್ಯಾರ್ಥಿನಿಯರು ಈ ನಿಯಮ ಪಾಲಿಸಿ ಕಾಲೇಜಿಗೆ ಬಂದಿದ್ದರು. 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಇದಕ್ಕೆ ಒಪ್ಪದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ರೈ, ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಿದರು. ಅವರಿಗೆ ವಾಚನಾಲಯಕ್ಕೆ ಹೋಗಲು ಕೂಡ ಅವಕಾಶ ನಿರಾಕರಿಸಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.

ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಕಾಲೇಜಿನ ವಿಭಾಗ ಮುಖ್ಯಸ್ಥರ ಸಮಿತಿ ಸಭೆ ನಡೆಸಿ, ವಿದ್ಯಾರ್ಥಿನಿಯರು ಹಿಜಾಬ್ ಅನ್ನು ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ತೆಗೆದಿಟ್ಟು ತರಗತಿಗೆ ಬರುವಂತೆ ತಿಳಿಸಿತ್ತು.

ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಿಡಿಸಿ ಸಭೆಯಲ್ಲಿ, ಹಿಜಾಬ್ ಧರಿಸಿ ಕಾಲೇಜು ಪ್ರವೇಶವಿಲ್ಲ ಎಂದು ನಿರ್ಧಾರವಾಗಿತ್ತು. ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳುವುದಿದ್ದರೆ ವ್ಯವಸ್ಥೆ ಮಾಡುವುದಾಗಿ ನಿರ್ಣಯಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು