ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನ ಅತ್ಯಾಚಾರ ಪ್ರಕರಣ ಬೇಧಿಸಿದ ಪೊಲೀಸರಿಗೆ ₹ 5 ಲಕ್ಷ ಬಹುಮಾನ: ಜ್ಞಾನೇಂದ್ರ

Last Updated 28 ಆಗಸ್ಟ್ 2021, 8:37 IST
ಅಕ್ಷರ ಗಾತ್ರ

ಬೆಂಗಳೂರು: ‘ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಕುಮಾರಕೃಪಾ ಅತಿಥಿಗೃಹದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಇದೊಂದು ಅಮಾನವೀಯ ಕೃತ್ಯ. ಮೈಸೂರು ಸಾಂಸ್ಕೃತಿಕ ನಗರಿ. ಕೃತ್ಯದ ಬಳಿಕ ಸಾಕಷ್ಟು ಆತಂಕ ವ್ಯಕ್ತವಾಗಿತ್ತು. ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ₹ 5 ಲಕ್ಷ ಬಹುಮಾನ ನೀಡಲಾಗುವುದು’ ಎಂದರು.

‘ಇಂಥ ನೂರಾರು ಪ್ರಕರಣಗಳಲ್ಲಿ ನಮ್ಮ ಪೊಲೀಸ್‌ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ನಮಗೆ ಪ್ರಕರಣ ಬೇಧಿಸುತ್ತಾರೆ ಎಂಬ ವಿಶ್ವಾಸವಿತ್ತು. ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂಬ ಸಂದೇಶವನ್ನು ಪೋಲಿಸರು ಕೊಟ್ಟಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ತಮಿಳುನಾಡಿನಿಂದ ನಿತ್ಯ ಮೈಸೂರಿಗೆ ಬಂದು ಹೋಗುತ್ತಿದ್ದರು ಎಂಬ ಮಾಹಿತಿಯೂ ಸಿಕ್ಕಿದೆ. ಸಂತ್ರಸ್ತೆಯ ಹೇಳಿಕೆ ಪಡೆಯುವ ಸಂಬಂಧ ಆಕೆಯ ಕುಟುಂಬದ ಸದಸ್ಯರನ್ನು ಮನವೊಲಿಸಲಾಗುತ್ತಿದೆ’ ಎಂದರು.

‘ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗಬೇಕು. ಸಂತ್ರಸ್ತೆ ಇನ್ನೂ ಆಘಾತದಲ್ಲಿ ಇದ್ದಾರೆ. ಹೀಗಾಗಿ ಆಕೆಯಿಂದ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ. ಈ ಪ್ರಕರಣ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ತಾಂತ್ರಿಕ ನೆಲೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ’ ಎಂದರು.

‘ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಗಸ್ತು ಹೆಚ್ಚಿಸಲಾಗುವುದು. ಸಂಜೆ 7 ಗಂಟೆಯ ನಂತರ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ಜನರಿಗೆ ತೊಂದರೆ ಆಗದಂತೆ ರಕ್ಷಣೆ ನೀಡಲಾಗುವುದು. ಮೈಸೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ತಮಿಳುನಾಡು, ಕೇರಳದಿಂದ ಬರುವವರ ಸಂಖ್ಯೆಯೂ ಜಾಸ್ತಿ ಇದೆ. ಗಡಿ ಭಾಗದಲ್ಲಿ ಬರುವವರು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ’ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ‘ನಾನು ಮೈಸೂರಲ್ಲಿ ಸಭೆಗಳನ್ನೇ ಮಾಡುತ್ತಿದ್ದರೆ, ಪೊಲೀಸರು ತನಿಖೆ ಮುಂದುವರಿಸಲು ಆಗುತ್ತಿರಲಿಲ್ಲ. ಹೀಗಾಗಿ ನಾನು ಪೂರ್ವಯೋಜಿತ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗವಹಿಸಿದ್ದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT