ಭಾನುವಾರ, ಜೂನ್ 13, 2021
25 °C

ಆಮ್ಲಜನಕ ಸಂಗ್ರಹಕ್ಕೆ ಕೇಂದ್ರದಿಂದ 10 ಟ್ಯಾಂಕರ್‌ ಭರವಸೆ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಸಂಗ್ರಹಿಸಿಡಲು ಹೆಚ್ಚಿನ ಸಂಖ್ಯೆಯಲ್ಲಿ ಟ್ಯಾಂಕರ್‌ಗಳು ಇಲ್ಲದ ಕಾರಣ, ತಕ್ಷಣವೇ 10 ಟ್ಯಾಂಕರ್‌ಗಳ ವ್ಯವಸ್ಥೆ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಲ್ಲದೆ, ಬಹ್ರೈನ್‌ ಮತ್ತು ಇತರ ದೇಶಗಳಿಂದ ಕರ್ನಾಟಕದ ಬಂದರಿಗೆ ಬಂದಿರುವ ಟ್ಯಾಂಕರ್‌ಗಳನ್ನು ಬಳಸಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ದೆಹಲಿ ಭೇಟಿಯ ಬಳಿಕ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಮಿತ್‌ ಶಾ ಜತೆಗಿನ ಮಾತುಕತೆಯ ವಿವರಗಳನ್ನು ನೀಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ಇಲ್ಲಿಯೇ ಬಳಸಿಕೊಳ್ಳಲು ಒಪ್ಪಿಗೆ ನೀಡಬೇಕು ಮತ್ತು ಆಮ್ಲಜನಕದ ಕೋಟಾವನ್ನು ಹೆಚ್ಚಿಸಬೇಕು. ದೂರದ ರಾಜ್ಯಗಳಿಂದ ಆಮ್ಲಜನಕವನ್ನು ತರಿಸುವುದು ಕಷ್ಟವಾಗುತ್ತಿದೆ ಎಂಬುದನ್ನು ಅವರ ಗಮನಕ್ಕೆ ತರಲಾಯಿತು. ಇದಕ್ಕಾಗಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು’ ಎಂದರು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಶಾ ಅವರು ಆತಂಕ ವ್ಯಕ್ತಪಡಿಸಿದರು. ಎಲ್ಲರೂ ಒಗ್ಗಟ್ಟಿನಿಂದ ಕೋವಿಡ್‌ ಹಿಮ್ಮೆಟ್ಟಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಇದಕ್ಕೆ ಕೇಂದ್ರದಿಂದ ಅಗತ್ಯ ನೆರವು ನೀಡಲಾಗುವುದಾಗಿ ಹೇಳಿದರು. ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದೆವು. ಶಾ ಅವರು ಸಮಾಧಾನ ವ್ಯಕ್ತಪಡಿಸಿದರು ಎಂದು ಬೊಮ್ಮಾಯಿ ಹೇಳಿದರು.

ಕೋವಿಡ್ ನಿರ್ವಹಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದು ಸತ್ಯಕ್ಕೆ ದೂರ ಸಂಗತಿ. ಇಡೀ ದೇಶದಲ್ಲೇ ಪ್ರಕರಣಗಳು ಹೆಚ್ಚಾಗಿವೆ. ಆದ್ದರಿಂದ ಎಲ್ಲರೂ ಕೂಡಿ ನಿಯಂತ್ರಣಕ್ಕೆ ತರಬೇಕು ಎಂದು ಸಲಹೆ ನೀಡಿದರು.

ಬೋಯಿಂಗ್‌ ಕಂಪನಿ ರಾಜ್ಯದಲ್ಲಿ ಎರಡು ಆಸ್ಪತ್ರೆಗಳನ್ನು ಮಾಡಲು ಪ್ರಸ್ತಾಪ ಮುಂದಿಟ್ಟಿದ್ದಾರೆ. ಯಲಹಂಕ ಮತ್ತು ಕಲಬುರ್ಗಿಯಲ್ಲಿ ಆಮ್ಲಜನಕ ಸಹಿತ 250 ಹಾಸಿಗೆಗಳ ಆಸ್ಪತ್ರೆ ಸ್ಥಾಪಿಸಲಾಗುವುದು. ಇದಕ್ಕೂ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದರು.

ರಾಜಕೀಯ ಉದ್ದೇಶವಿಲ್ಲ: ‘ಈ ಭೇಟಿಯಲ್ಲಿ ರಾಜಕೀಯ ಉದ್ದೇಶವಿರಲಿಲ್ಲ. ಕೋವಿಡ್‌ ಬಿಟ್ಟು ಬೇರೆ ಯಾವುದೇ ವಿಷಯಗಳು ಪ್ರಸ್ತಾಪಕ್ಕೆ ಬರಲಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಬಸವರಾಜ ಬೊಮ್ಮಾಯಿ ಮುಂದಿನ ಮುಖ್ಯಮಂತ್ರಿ’ ಎಂಬ ವದಂತಿ ಹರಡಿರುವ ಕುರಿತು ಪ್ರಶ್ನಿಸಿದಾಗ, ‘ಆ ರೀತಿ ಯೋಚನೆ ಮಾಡುವುದೇ ತಪ್ಪು. ಸರ್ಕಾರದ ಮೊದಲ ಆದ್ಯತೆ ಕೋವಿಡ್‌ ನಿಯಂತ್ರಣಕ್ಕೆ ತರುವುದು. ಮುಖ್ಯಮಂತ್ರಿ ಬದಲಾವಣೆ ವಿಚಾರ ಹಸಿ ಸುಳ್ಳು’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು