ಭಾನುವಾರ, ಜುಲೈ 3, 2022
26 °C

ತೋಟಗಾರಿಕಾ ಮೇಳ ಉದ್ಘಾಟನೆ: ರೈತರ ಆದಾಯ ದ್ವಿಗುಣಗೊಳಿಸಲು ಕ್ರಮ –ಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರೈತರ ಆದಾ ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸಲು ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ ಲೈನ್ ಮೂಲಕ ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು. ‘ತೋಟಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದರು.

‘ಸಿಎಫ್‌ಆರ್‌ಟಿಆರ್‌ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ’ ಎಂದು ಮುಖ್ಯಮಂತ್ರಿ ತಿಳಿಸಿದರು.

‘ಪ್ರಧಾನ ಮಂತ್ರಿಯವರು 100ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಶೀಘ್ರವಾಗಿ ಕೊಳೆತು ಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು’ ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಮಾತನಾಡಿ, ‘ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿರುವುದು ರೈತರಿಗೆ ತೋಟಗಾರಿಕೆ ಲಾಭದಾಯಕ ಎಂಬುದಕ್ಕೆ ನಿದರ್ಶನ. ವಿಜ್ಞಾನಿಗಳು ರೈತರಿಗೆ ಇನ್ನೂ ಹೆಚ್ಚು ಹೆಚ್ಚು ಲಾಭ ತರುವ ತಳಿಗಳನ್ನು ಸಂಶೋಧಿಸಿ, ರೈತರ ಬದುಕು ಹಸನುಗೊಳಿಸಬೇಕು’ ಎಂದು ಸಲಹೆ ನೀಡಿದರು. ತೋಟಗಾರಿಕಾ ವಿಶ್ವವಿದ್ಯಾಲಯ ರೈತರಿಗೆ ಹಮ್ಮಿಕೊಳ್ಳುತ್ತಿರುವ ತರಬೇತಿ ಕಾರ್ಯಕ್ರಮಗಳ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ತೋಟಗಾರಿಕಾ ಸಚಿವ ನಾರಾಯಣಗೌಡ ಅವರು ಮಾತನಾಡಿ, ‘ತೋಟಗಾರಿಕೆ ಉತ್ಪನ್ನಗಳ ರಫ್ತು ಪ್ರಮಾಣ ಶೇ 2.5 ರಿಂದ ಶೇ 5ಕ್ಕೇರಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ರೈತರಿಗೆ ಅಗತ್ಯ ಬೆಂಬಲ ನೀಡಲಾಗುವುದು’ ಎಂದು ತಿಳಿಸಿದರು.

ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ, ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ. ಇಂದ್ರೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು