ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಣ್ಣ ಪ್ರತಿಮೆ ವಿವಾದ ಇತ್ಯರ್ಥಕ್ಕೆ ಕ್ರಮ: ಸಚಿವ ರಮೇಶ ಜಾರಕಿಹೊಳಿ ಭರವಸೆ

Last Updated 23 ಆಗಸ್ಟ್ 2020, 11:38 IST
ಅಕ್ಷರ ಗಾತ್ರ

ಬೆಳಗಾವಿ/ಗೋಕಾಕ: ‘ಬೆಳಗಾವಿಯ ಪೀರನವಾಡಿ ಗ್ರಾಮದಲ್ಲಿ ಉಂಟಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದರು.

ಗೋಕಾಕದಲ್ಲಿ ಸಾರ್ವಜನಿಕ ಗಣೇಶ ಉತ್ಸವದ ವಿನಾಯಕ ಮೂರ್ತಿಗಳ ವಿಸರ್ಜನೆ ಬಳಿಕ ಗೃಹ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಅವರು ಹಾಲುಮತ ಸಮಾಜದ ಮುಖಂಡರ ಸಭೆ ನಡೆಸಿದರು.

‘ನಮ್ಮ ಸರ್ಕಾರದ ಮೇಲೆ ಭರವಸೆ ಇಡಿ. ಕೊಟ್ಟ ‌ಮಾತಿನಂತೆ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ಕ್ರಮ ವಹಿಸುವೆ. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಯಣ್ಣ ನಮಗೆಲ್ಲ ಮಾದರಿ ನಾಯಕ. ಆದ್ದರಿಂದ ವಿವಾದವನ್ನು ಶೀಘ್ರವಾಗಿ ಬಗೆಹರಿಸಿ ಪ್ರತಿಮೆ ಸ್ಥಾಪಿಸಲಾಗುವುದು’ ಎಂದು ಹೇಳಿದರು.

‘ಆದಷ್ಟು ಬೇಗ ವಿವಾದ ಸುಖಾಂತ್ಯವಾಗಲಿದೆ. ಈ ವಿಷಯದಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಆದರೆ, ಆ ಜಾಗ ಬೇಕು, ಈ ಜಾಗ ಬೇಡ ಎನ್ನಬಾರದು. ಒಳ್ಳೆಯ ಜಾಗದಲ್ಲೇ ಪ್ರತಿಷ್ಠಾಪನೆ ಮಾಡೋಣ. ಗಣೇಶೋತ್ಸವ ಮತ್ತು ಮೂರ್ತಿಗಳ ವಿಸರ್ಜನೆ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ವಿವಾದಕ್ಕೆ ತೆರೆ ಎಳೆಯಲಾಗುವುದು. ಅಲ್ಲಿಯವರೆಗೆ ಸಹಕಾರ ನೀಡಬೇಕು’ ಎಂದು ಕೋರಿದರು.

‘ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ರಾಯಣ್ಣನ ಅಭಿಮಾನಿಗಳು ಹಾಗೂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗಳನ್ನು ಹಿಂಪಡೆಯಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್‌ಗಳನ್ನು ಹಾಕುವುದನ್ನು ನಿಲ್ಲಿಸಬೇಕು’ ಎಂದು ಮನವಿ ಮಾಡಿದರು.

ವಿಧಾನಪರಿಷತ್‌ ಸದಸ್ಯ ವಿವೇಕರಾವ ಪಾಟೀಲ, ಕುರುಬ ಸಮಾಜದ ಮುಖಂಡ ರಾಜೇಂದ್ರ ಸಣ್ಣಕ್ಕಿ ಪಾಲ್ಗೊಂಡಿದ್ದರು.

ಗ್ರಾಮದಲ್ಲಿ ಆ.15ರಂದು ಪ್ರತಿಷ್ಠಾಪನೆಗೆ ಮುಂದಾಗಿದ್ದವರಿಂದ ಪೊಲೀಸರು ರಾಯಣ್ಣನ ಪ್ರತಿಮೆಯನ್ನು ವಶಕ್ಕೆ ಪಡೆದುಕೊಂಡ ನಂತರ ಪ್ರತಿಭಟನೆ ನಡೆದಿತ್ತು. ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪೊಲೀಸರಿಗೆ ಸೂಚಿಸಿದ್ದರು. ಗ್ರಾಮಸ್ಥರು, ಕನ್ನಡಪರ ಹೋರಾಟಗಾರರು ಹಾಗೂ ಹಾಲುಮತ ಸಮಾಜದವರು ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದರು. ರಾಜ್ಯದ ಹಲವು ಜಿಲ್ಲೆಗಳಲ್ಲೂ ಪ್ರತಿಭಟನೆಗಳು ನಡೆದಿದ್ದವು. ಮುಖಂಡರೊಂದಿಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ನಡೆಸಿದ್ದ ಸಂಧಾನ ಸಭೆ ವಿಫಲವಾಗಿತ್ತು. ಮುಖ್ಯಮಂತ್ರಿ ಜಿಲ್ಲಾ ಪ್ರವಾಸ ನಿಗದಿಯಾದ ಬೆನ್ನಲ್ಲೇ ಸಚಿವರು ಸಮಾಜದ ಪ್ರಮುಖರ ಸಭೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT