ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಬಿಪಿಎಸ್‌ನಲ್ಲಿ ಕನ್ನಡಕ್ಕಿಲ್ಲ ಆದ್ಯತೆ: ಸಂಸದ ಪ್ರಜ್ವಲ್ ರೇವಣ್ಣ‌ ಆಕ್ಷೇಪ

Last Updated 7 ಆಗಸ್ಟ್ 2020, 11:29 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ಹುದ್ದೆಗಳ ಭರ್ತಿಗಾಗಿ ಐಬಿಪಿಎಸ್‌ (ಬ್ಯಾಂಕಿಂಗ್‌ ಸಿಬ್ಬಂದಿ ಆಯ್ಕೆ ಸಂಸ್ಥೆ) ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಆದ್ಯತೆ ಸಿಗದೇ ಇರುವುದಕ್ಕೆ ಸಂಸದ ಪ್ರಜ್ವಲ್‌ ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ತಾಣ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಪೋಸ್ಟ್‌ ಪ್ರಕಟಿಸಿರುವ ಅವರು, ‘ಐಬಿಪಿಎಸ್ ಪರೀಕ್ಷೆಗಳಲ್ಲಿ 2014 ರ ಹಿಂದೆ ಇದ್ದ ನಿಯಮಗಳನ್ನು ಪುನಃ ಜಾರಿಗೊಳಿಸುವಂತೆ ಹಾಗೂ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕನ್ನಡಪರ ಸಂಘಟನೆಗಳು ಹಾಗೂ ಹಿಂದಿನ ಸರ್ಕಾರ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿತ್ತು. ಇದಕ್ಕೆ ನಿರ್ಮಲಾ ಸೀತಾರಾಮನ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರು, ರಾಜ್ಯಸಭೆಯ ಕಲಾಪದಲ್ಲಿ ಈ ಬಗ್ಗೆ ಭರವಸೆ ಕೂಡ ನೀಡಿದ್ದರು, ಆದರೆ 2020ರ ಐಬಿಪಿಎಸ್ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದರಿಂದ ಕನ್ನಡಿಗರ ನಿರೀಕ್ಷೆಗಳು ಹುಸಿಯಾಗಿವೆ. ಕೇಂದ್ರದ ಈ ನಿರ್ಧಾರದಿಂದ ಕರ್ನಾಟಕದ ಸಾವಿರಾರು ಆಕಾಂಕ್ಷಿಗಳು ಉದ್ಯೋಗ ವಂಚಿತರಾಗಲಿದ್ದಾರೆ,’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡದೆ ಇದ್ದರೆ ದೊಡ್ಡಮಟ್ಟದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿವಿಧ ಬ್ಯಾಂಕ್‌ಗಳಲ್ಲಿನ 1417ಹುದ್ದೆ ಭರ್ತಿಗಾಗಿ ಐಬಿಪಿಎಸ್‌ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದೆ. ಪರೀಕ್ಷೆಗಳನ್ನು ಬರೆಯಲು ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT