ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಬಿಪಿಎಸ್‌: ಪ್ರಾದೇಶಿಕ ಭಾಷೆಗೆ ಆದ್ಯತೆ ಒದಗಿಸಲು ಒತ್ತಾಯ

Last Updated 13 ಜುಲೈ 2021, 19:55 IST
ಅಕ್ಷರ ಗಾತ್ರ

ಬೆಂಗಳೂರು: ‘ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್‌) ರಾಷ್ಟ್ರೀಕೃತ ಬ್ಯಾಂಕುಗಳ ವಿವಿಧ ಹುದ್ದೆಗಳಿಗೆ ನಡೆಸುವ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಉತ್ತರಿಸಲು ಅವಕಾಶ ನೀಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿವೆ.

ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

‘ಐಬಿಪಿಎಸ್ ಸಂಸ್ಥೆಯು ಸದ್ಯ ನಡೆಸುತ್ತಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆಯನ್ನು ನಡೆಸಿ, ಕನ್ನಡಿಗರಿಗೆ ನ್ಯಾಯ ಸಿಗುವಂತೆ ಕ್ರಮವಹಿಸುವ ತುರ್ತು ಅಗತ್ಯವಿದೆ. ಇಲ್ಲಿನ ಕೆನರಾ ಬ್ಯಾಂಕ್ ಸೇರಿದಂತೆ ಒಟ್ಟು 11 ಬ್ಯಾಂಕುಗಳಲ್ಲಿ ಖಾಲಿ ಇರುವ 3 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಿರುವುದರಿಂದ ಕನ್ನಡಿಗರಿಗೆ ಸಿಗಬೇಕಾದ ಹುದ್ದೆಗಳು ಕೈತಪ್ಪಿವೆ. ಕೇಂದ್ರದ ವಿತ್ತ ಸಚಿವರು ಈ ಹಿಂದೆ ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕಿಂಗ್‌ ನೇಮಕಾತಿ ನಡೆಸುವುದಾಗಿ ಭರವಸೆ ನೀಡಿದ್ದರು. ಆದರೆ, ಅದು ಹುಸಿಯಾಗಿದೆ’ ಎಂದು ಟಿ.ಎಸ್. ನಾಗಾಭರಣ ಬೇಸರ ವ್ಯಕ್ತಪಡಿಸಿದ್ದಾರೆ.

‘ರಾಜ್ಯ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳು ಹಾಗೂ ಖಾಸಗಿ ವಲಯದ ಹುದ್ದೆಗಳಲ್ಲಿ ಶೇ 75 ರಷ್ಟು ಹುದ್ದೆಗಳನ್ನು ಆಯಾ ರಾಜ್ಯದವರಿಗೆ ಮೀಸಲಿಡುವ ರಾಷ್ಟ್ರೀಯ ನೀತಿಯನ್ನು ರೂಪಿಸಿ, ಅದನ್ನು ಜಾರಿ ಮಾಡಬೇಕು. ರಾಷ್ಟ್ರೀಯ ಸಿಬ್ಬಂದಿ ಆಯ್ಕೆ ಆಯೋಗದ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿದೆ. ಆದರೆ, ನೇಮಕಾತಿ ಪರೀಕ್ಷೆಗಳು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಯುತ್ತಿವೆ. ಇದರಿಂದ ಸ್ಥಳೀಯರಿಗೆ ಯಾವುದೇ ಉಪಯೋಗವಾಗಿಲ್ಲ’ ಎಂದು ತಿಳಿಸಿದ್ದಾರೆ.

‘ಉದ್ಯೋಗ ವಂಚಿತರಾಗುತ್ತಿರುವ ಕನ್ನಡಿಗರು’

‘ಐಬಿಪಿಎಸ್ ಸಂಸ್ಥೆಯು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಕನ್ನಡ ಭಾಷೆಗೆ ಆದ ಅಪಚಾರ ಎಂದೇ ಭಾವಿಸಬೇಕಾಗುತ್ತದೆ. ಅಭ್ಯರ್ಥಿಯ ಸಾಮಾನ್ಯ ಜ್ಞಾನ, ಕೌಶಲ್ಯ, ಪರಿಣಿತಿ ಹಾಗೂ ಬದ್ಧತೆಯನ್ನು ಪರೀಕ್ಷಿಸಲು ಪ್ರಾದೇಶಿಕ ಭಾಷೆ ಉತ್ತಮ ಸಾಧನ. ಇದನ್ನು ಸಂಸ್ಥೆಯು ಅರಿತುಕೊಳ್ಳಬೇಕು’ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT