ಭಾನುವಾರ, ಏಪ್ರಿಲ್ 2, 2023
31 °C
‘ಲಸಿಕೆ; ಸುಧಾಕರ್‌ ಸುಳ್ಳು ಹೇಳುತ್ತಿದ್ದಾರೆ’

ಈಗಿನ ಪರಿಸ್ಥಿತಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲೇಬಾರದು: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಕೋವಿಡ್‌ ಲಸಿಕೆ ವಿಚಾರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸುಳ್ಳು ಹೇಳುತ್ತಿದ್ದಾರೆ. ರಾಜ್ಯದಲ್ಲಿ 5 ಲಕ್ಷ ಡೋಸ್‌ ಲಸಿಕೆ ದಾಸ್ತಾನು ಇದೆ ಎನ್ನುತ್ತಿದ್ದಾರೆ. ಲಸಿಕೆ ದಾಸ್ತಾನ ಇದ್ದರೆ, ಜನರು ಕ್ಯೂ ನಿಂತು ಲಸಿಕೆ ಸಿಗದೆ ಸರ್ಕಾರಕ್ಕೆ ಶಾಪ ಹಾಕಿಕೊಂಡು ಹೋಗುತ್ತಿರುವುದು ಏಕೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ಲಸಿಕೆ ಹಂಚಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ‌.
ಸರಿಯಾದ ಸಿದ್ಧತೆ ಮಾಡಿಕೊಳ್ಳದೆ ಜನರು ಲಸಿಕೆಗಾಗಿ ಅಲೆಯುವಂತೆ ಮಾಡಿದ್ದಾರೆ ಎಂದು ದೂರಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲೇಬಾರದು: ‘ಈಗಿನ ಪರಿಸ್ಥಿತಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲೇಬಾರದು. ಪಿಯುಸಿ ಪರೀಕ್ಷೆ ರದ್ದುಮಾಡಿರುವಾಗ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದರಲ್ಲಿ ಅರ್ಥವಿಲ್ಲ. ಈ ಬಗ್ಗೆ ಸಚಿವರಿಗೂ ಹೇಳಿದ್ದೇನೆ. ಆದರೆ ಯಾವುದೇ ಪ್ರಯೋಜನ ಆಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಬಿ.ಎಸ್‌.ಯಡಿಯೂರಪ್ಪ ಮಂತ್ರಿ ಮಂಡಲದಲ್ಲಿ ಸಮನ್ವಯತೆಯೇ ಇಲ್ಲ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ನನಗೆ ಗೊತ್ತೇ ಇಲ್ಲ ಎಂದು  ಆರೋಗ್ಯ ಸಚಿವರು ಹೇಳಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಮತ್ತು ಸುಧಾಕರ್‌ ನಡುವೆಯೇ ಸಮನ್ವಯತೆಯ ಕೊರತೆಯಿದೆ’ ಎಂದರು.

ಅಧಿವೇಶನ ಕರೆಯಬೇಕಿತ್ತು: ರಾಜ್ಯದಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿದ್ದು, ಅವುಗಳ ಬಗ್ಗೆ ಚರ್ಚಿಸಲು ಅಧಿವೇಶನ ಕರೆಯಬೇಕಿತ್ತು. ಅಧಿವೇಶನ ನಡೆಸಿದರೆ ಎಲ್ಲಿ ತಮ್ಮ ಬಣ್ಣ ಬಯಲಾಗುವುದೋ ಎಂಬ ಭಯ ಸರ್ಕಾರವನ್ನು ಕಾಡುತ್ತಿದೆ. ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಿಲ್ಲ. ಬಿಜೆಪಿಗೆ ಪ್ರಜಾಪ್ರಭತ್ವದ ಮೇಲೆ ನಂಬಿಕೆ ಇಲ್ಲ ಎಂದು ಹರಿಹಾಯ್ದರು.

ಗೊಂದಲ ಬಗೆಹರಿಸಲು ಸೂಚಿಸಿದ್ದೇನೆ: ‘ಯುವ ಕಾಂಗ್ರೆಸ್‌ ಅಧ್ಯಕ್ಷರ ನೇಮಕಾತಿಯಲ್ಲಿ ನನ್ನ ಅಥವಾ ಡಿ.ಕೆ.ಶಿವಕುಮಾರ್‌ ಅವರ ಯಾವುದೇ ಪಾತ್ರವಿಲ್ಲ. ಈಗ ಗೊಂದಲ ಉಂಟಾಗಿದ್ದು, ಅದನ್ನು ಬಗೆಹರಿಸಿ ಎಂದು ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರಿಗೆ ಹೇಳಿದ್ದೇನೆ’ ಎಂದು ಸ್ಪಷ್ಟಪಡಿಸಿದರು.

ಮುಂದಿನ ಸಿ.ಎಂ ಚರ್ಚೆಯೇ ಆಗಿಲ್ಲ: ‘ಮುಂದಿನ ಮುಖ್ಯಮಂತ್ರಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಕಾಂಗ್ರೆಸ್‌ನಲ್ಲಿ ಮೂಲ ಹಾಗೂ ವಲಸಿಗ ಎಂಬ ಪ್ರಶ್ನೆಯೇ ಇಲ್ಲ. ಹೊರಗಿನಿಂದ ಬಂದ ನಾನು, ಐದು ವರ್ಷ ಮುಖ್ಯಮಂತ್ರಿ ಆಗಿದ್ದೇನೆ. ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆ ನಂತರ ಶಾಸಕರು, ವರಿಷ್ಠರು ತೀರ್ಮಾನಿಸುತ್ತಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು