ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳನೋಟ: ಮನೋವ್ಯಾಧಿ ಉಲ್ಬಣ- ಕೈಗೆಟುಕದ ಚಿಕಿತ್ಸೆ

ಖಿನ್ನತೆ, ಮಾನಸಿಕ ಸಮಸ್ಯೆಗಳಿಗೆ ನಿಮ್ಹಾನ್ಸ್‌ ಸಂಸ್ಥೆಗೆ 6 ಲಕ್ಷ ಮಂದಿ ಕರೆ
Last Updated 20 ನವೆಂಬರ್ 2021, 20:10 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಕಾಣಿಸಿಕೊಂಡ ಬಳಿಕ ಮನೋರೋಗಗಳಿಂದ ಬಳಲುವವರ ಸಂಖ್ಯೆ ಹೆಚ್ಚಳವಾಗಿದೆ. ವಿವಿಧ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್‌) ಸಹಾಯವಾಣಿಗೆ ಈವರೆಗೆ 6 ಲಕ್ಷ ಮಂದಿ ಕರೆ ಮಾಡಿದ್ದಾರೆ.

ಕಳೆದ ವರ್ಷ ಮಾರ್ಚ್‌ ತಿಂಗಳಲ್ಲಿ ಕೋವಿಡ್ ಕಾಣಿಸಿಕೊಂಡ ಬಳಿಕಸಂಸ್ಥೆಯು ಸಹಾಯವಾಣಿ ಪ್ರಾರಂಭಿಸಿತ್ತು. ಆರೋಗ್ಯ ಇಲಾಖೆಯ ಮಾನಸಿಕ ಆರೋಗ್ಯ ವಿಭಾಗವು ಈವರೆಗೆ ಕೋವಿಡ್‌ ಪೀಡಿತರು ಸೇರಿದಂತೆ 23.90 ಲಕ್ಷಕ್ಕೂ ಅಧಿಕ ಮಂದಿಯನ್ನು ಸಂಪರ್ಕಿಸಿ, ಸಲಹೆ–ಸೂಚನೆಗಳನ್ನು ನೀಡಿದೆ.ವೈದ್ಯರು, ಕಾರ್ಮಿಕರಿಗೆ ಕೂಡ ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿ ಕೌನ್ಸೆಲಿಂಗ್ ನಡೆಸಲಾಗಿದೆ. 25ರಿಂದ 50 ವರ್ಷದೊಳಗಿನವರು ಹೆಚ್ಚಾಗಿ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವುದು ಆಪ್ತ ಸಮಾಲೋಚನಾ ಕರೆಗಳಿಂದ ದೃಢಪಟ್ಟಿದೆ.

ಕೊರೊನಾ ಸೋಂಕಿತರಾದವರಲ್ಲಿ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳೂ ಸಾಕಷ್ಟಿವೆ.

ಕೋವಿಡ್ ಕಾಣಿಸಿಕೊಂಡ ನಂತರ ಜೀವನವಿಧಾನ ಹಾಗೂ ಕಾರ್ಯಕ್ಷೇತ್ರದಲ್ಲಿನ ವಾತಾವರಣ ಬದಲಾಗಿದೆ. ಇದಕ್ಕೆ ಹೊಂದಿಕೊಳ್ಳಲಾಗದ ಕೆಲವರು ಮನೋವ್ಯಾಧಿಗೆ ಒಳಪಡುತ್ತಿದ್ದಾರೆ. ಜಿಲ್ಲಾಮಟ್ಟದಲ್ಲಿ ಸರ್ಕಾರಿ ಆಪ್ತ ಸಮಾಲೋಚನಾ ಕೇಂದ್ರಗಳು ಇರದಿರುವುದರಿಂದ ನಿಮ್ಹಾನ್ಸ್‌ಗೆ ಬರುವ ಹೊರರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಪ್ರತಿನಿತ್ಯ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಹೊರರೋಗಿಗಳು ವಿವಿಧೆಡೆಯಿಂದ ಬರುತ್ತಿದ್ದಾರೆ.

15 ಜಿಲ್ಲೆಗಳಲ್ಲಿ ಕೇಂದ್ರ: ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ ಒಬ್ಬರು ಮನೋವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ, ರೋಗಿಗಳ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡಿ, ಪುನರ್ವಸತಿ ಕಲ್ಪಿಸಲು ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ರಾಜ್ಯ ಸರ್ಕಾರವು ಬೆಂಗಳೂರು, ಚಾಮರಾಜನಗರ ಸೇರಿದಂತೆ 15 ಜಿಲ್ಲೆಗಳಲ್ಲಿ ‌‘ಮಾನಸಧಾರಾ ಕೇಂದ್ರ’ಗಳನ್ನು ಪ್ರಾರಂಭಿಸಿದೆ. ಆದರೆ, ಈ ಕೇಂದ್ರಗಳು ಮೂಲಸೌಕರ್ಯದ ಕೊರತೆಯಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ.

ಮನೋಚೈತನ್ಯ (ಮಂಗಳವಾರದ ಕ್ಲಿನಿಕ್) ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆ, ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಖಾಸಗಿ ಆಸ್ಪತ್ರೆಗಳ ಮನೋವೈದ್ಯರು ಆಯ್ದ ಮಂಗಳವಾರದಂದು ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ, ಮನೋರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡುತ್ತಾರೆ. ಕೋವಿಡ್ ಕಾಣಿಸಿಕೊಂಡ ಬಳಿಕ ಕೆಲ ತಾಲ್ಲೂಕುಗಳಲ್ಲಿ ಈ ಕಾರ್ಯಕ್ರಮ ಸಮರ್ಪಕವಾಗಿ ನಡೆಯುತ್ತಿಲ್ಲ.

***

ಕೆಲಸದ ಸ್ವರೂಪ ಬದಲು, ಆರ್ಥಿಕ ಸಂಕಷ್ಟ, ಮನೆಯಲ್ಲಿ ಹೊಂದಾಣಿಕೆ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ಮನೋರೋಗಕ್ಕೆ ಒಳಪಡುವವರ ಸಂಖ್ಯೆ ಹೆಚ್ಚಳವಾಗಿದೆ

-ಡಾ. ಶಶಿಧರ್ ಎಚ್.ಎನ್., ನಿಮ್ಹಾನ್ಸ್‌ನ ಸ್ಥಾನಿಕ ವೈದ್ಯಾಧಿಕಾರಿ (ಆರ್‌ಎಂಒ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT