ಗುರುವಾರ , ಮೇ 13, 2021
40 °C

ಆಸ್ಪತ್ರೆಗಳಿಗೆ ಹೆಚ್ಚಿನ ಆಮ್ಲಜನಕ: ಸೂಚನೆ: ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವುದನ್ನು ಕಡಿಮೆ ಮಾಡಿ ಆಸ್ಪತ್ರೆಗಳಿಗೆ  ಹೆಚ್ಚಿನ ಆಮ್ಲಜನಕ ಪೂರೈಕೆ ಮಾಡಬೇಕು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್‌ ರೋಗಿಗಳಿಗೆ ಆಮ್ಲಜನಕ ಪೂರೈಕೆ ಮತ್ತು ಲಭ್ಯತೆ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಜತೆ ವಿಧಾನಸೌಧದಲ್ಲಿ ಸಭೆ ನಡೆಸಿದ ಶೆಟ್ಟರ್‌, ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಮ್ಲಜನಕದ ಉತ್ಪಾದನೆ ಆಗುತ್ತಿದೆ. ಬೆಂಗಳೂರು ನಗರದಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದರು.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಕ್ಕೆ ಅಗತ್ಯವಿರುವಷ್ಟು ಆಮ್ಲಜನಕ ಉತ್ಪಾದನೆ ಆಗುತ್ತಿದೆ. ಆದರೆ ಸಿಲಿಂಡರ್‌ಗಳ ಕೊರತೆ ಇದ್ದು, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬೆಂಗಳೂರನ್ನು ತಲುಪುವ ಆಮ್ಲಜನಕವನ್ನು ಸರಿಯಾದ ರೀತಿಯಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಸೂಕ್ತ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.

ಆಮ್ಲಜನಕ ಉತ್ಪಾದಕರೊಂದಿಗೆ ಸಮಾಲೋಚನೆ ನಡೆಸಿ. ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಅವುಗಳಿಗೆ ಪರಿಹಾರ ಸೂಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದೂ ಶೆಟ್ಟರ್‌ ಹೇಳಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿ, ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ಅಕ್ಕಪಕ್ಕದ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅದನ್ನು ಇಲ್ಲಿಯೇ ಬಳಸಬೇಕು. ಇದಕ್ಕಾಗಿ ಆಮ್ಲಜನಕ ಉತ್ಪಾದಿಸುವ ಉದ್ಯಮಗಳಿಗೆ ಅಗತ್ಯ ಸೂಚನೆ ನೀಡಬೇಕು. ರಾಜ್ಯಕ್ಕೆ ಬೇಕಾಗಿರುವ ಸಿಲಿಂಡರ್‌ಗಳನ್ನು ಒದಗಿಸಲು ಕೇಂದ್ರಕ್ಕೆ ಪತ್ರ ಬರೆಯಬೇಕು ಎಂದೂ ಹೇಳಿದರು.

ಸಭೆಯಲ್ಲಿ ಆಮ್ಲಜನಕ ಉತ್ಪಾದಕರು ಮತ್ತು ಪೂರೈಕೆ ಸಂಸ್ಥೆಗಳ ಪ್ರತಿನಿಧಿಗಳು ಸರ್ಕಾರದ ಹಿರಿಯ ಅಧಿಕಾರಿಗಳು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು