ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಜೀವನ್ ಮಿಷನ್: 97.91 ಲಕ್ಷ ಮನೆಗಳಿಗೆ ನೀರು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ
Last Updated 24 ಸೆಪ್ಟೆಂಬರ್ 2021, 16:55 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಜಲ ಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ 2023ರ ಅಂತ್ಯದೊಳಗೆ 97.91 ಲಕ್ಷ ಮನೆಗಳಿಗೆ ಕೊಳವೆ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಗುರಿ ಇದೆ. ಇದಕ್ಕಾಗಿ ₹ 41,800 ಕೋಟಿ ವೆಚ್ಚ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, ‘ಈವರೆಗೆ 34.90 ಲಕ್ಷ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಎರಡು ವರ್ಷದೊಳಗೆ ಇನ್ನೂ 69.75 ಲಕ್ಷ ಮನೆಗಳಿಗೆ ಕೊಳವೆ ಮೂಲಕ ಶುದ್ಧ ನೀರು ಪೂರೈಕೆ ಮಾಡಲಾಗುವುದು’ ಎಂದರು.

ಜಲ ಜೀವನ್ ಮಿಷನ್‌ ಯೋಜನೆಯಡಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ₹ 11,010 ಕೋಟಿ ಮತ್ತು ಸುಸ್ಥಿರ ಜಲಮೂಲಗಳಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ನೀರು ಪೂರೈಸಲು ₹ 30,790 ಕೋಟಿ ವೆಚ್ಚ ಮಾಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇಕಡ 50ರ ಅನುಪಾತದಲ್ಲಿ ವೆಚ್ಚ ಭರಿಸಲಿವೆ ಎಂದು ತಿಳಿಸಿದರು.

ಈ ಯೋಜನೆಯಡಿ 2021–22ರಲ್ಲಿ 25.17 ಲಕ್ಷ, 2022–23ರಲ್ಲಿ 27.14 ಲಕ್ಷ ಮತ್ತು 2023ರಲ್ಲಿ 17.45 ಲಕ್ಷ ಮನೆಗಳಿಗೆ ನೀರು ಪೂರೈಕೆ ಸಂಪರ್ಕ ಕಲ್ಪಿಸಲಾಗುವುದು. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ನೀರನ್ನು ಬಳಸಿಕೊಂಡು ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದರು.

ಜಲಧಾರೆ ಸ್ಥಗಿತ: 2018–19ರ ಬಜೆಟ್‌ನಲ್ಲಿ ₹ 53,000 ಕೋಟಿ ವೆಚ್ಚದ ‘ಜಲಧಾರೆ’ ಯೋಜನೆ ಪ್ರಕಟಿಸಲಾಗಿತ್ತು. ಆದರೆ, ಯೋಜನೆ ಅನುಷ್ಠಾನಕ್ಕೆ ಬಂದಿಲ್ಲ. ಆ ಯೋಜನೆಯಡಿ ಕೈಗೆತ್ತಿಕೊಂಡಿದ್ದ ಕೆಲವು ಕಾಮಗಾರಿಗಳನ್ನು ಜಲ ಜೀವನ್‌ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಕಾಂಗ್ರೆಸ್‌ನ ಕೆ.ಸಿ. ಕೊಂಡಯ್ಯ ಅವರ ಪ್ರಶ್ನೆಗೆ ಉತ್ತರಿಸಿದರು.

₹ 2,894 ಕೋಟಿ ಮೊತ್ತದ ಹಾನಿ

2019–20 ಮತ್ತು 2020–21ರಲ್ಲಿ ಮಳೆ ಮತ್ತು ಪ್ರವಾಹದಿಂದ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು, ಸೇತುವೆಗಳು ಮತ್ತು ಕೆರೆಗಳಿಗೆ ₹ 2,894 ಕೋಟಿಯಷ್ಟು ಹಾನಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘2019–20ರಲ್ಲಿ ₹ 988.44 ಕೋಟಿ ಮತ್ತು 2020–21ರಲ್ಲಿ ₹ 1,905.67 ಕೋಟಿಯಷ್ಟು ಹಾನಿಯಾಗಿದೆ. ದುರಸ್ತಿಗಾಗಿ ₹ 260.72 ಕೋಟಿ ಬಿಡುಗಡೆಯಾಗಿದ್ದು, ₹ 182.87 ಕೋಟಿ ವೆಚ್ಚ ಮಾಡಲಾಗಿದೆ. ಇನ್ನೈ ₹ 1,905.58 ಕೋಟಿ ಅನುದಾನದ ಅಗತ್ಯವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT