ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕರ್ನಾಟಕ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಖಚಿತವೇ?

ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ
Last Updated 15 ಮಾರ್ಚ್ 2022, 11:29 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಜೂನ್‌ನಲ್ಲಿ ನಡೆಯಲಿರುವ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿರುವ ಬಿಜೆಪಿಯು, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಪ್ರಕಟಿಸದಿರುವುದರಿಂದ ಹೊರಟ್ಟಿ ಅವರ ಬಿಜೆಪಿ ಸೇರ್ಪಡೆ ಪ್ರಶ್ನೆ ಮತ್ತೆ ಮುನ್ನಲೆಗೆ ಬಂದಿದೆ.

ಹಾಲಿ ಸದಸ್ಯರಾದ ಅರುಣ್‌ ಶಹಾಪುರ ಅವರಿಗೆ ವಾಯವ್ಯ ಶಿಕ್ಷಕರ ಕ್ಷೇತ್ರ, ಹನುಮಂತ ನಿರಾಣಿ ಅವರಿಗೆ ವಾಯವ್ಯ ಪದವೀಧರರ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯನ್ನಾಗಿ ಬಸವರಾಜ ಗುರಿಕಾರ ಅವರ ಹೆಸರು ಘೋಷಿಸಲಾಗಿದೆ. ಆದರೂ, ಬಿಜೆಪಿ ಅಭ್ಯರ್ಥಿ ಹೆಸರು ಪ್ರಕಟಿಸದೆ ಕಾಯ್ದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ 22 ವಿಧಾನಸಭಾಶಾಸಕರಲ್ಲಿ 17 ಮಂದಿ ಬಿಜೆಪಿ ಶಾಸಕರಿದ್ದಾರೆ. ಮೂವರು ಸಂಸದರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದೇ ಕ್ಷೇತ್ರದ ಜನಪ್ರತಿನಿಧಿಗಳಾಗಿದ್ದಾರೆ. ಪದವೀಧರರ ವಿಧಾನ ಪರಿಷತ್‌ ಕ್ಷೇತ್ರ ಸೇರಿದಂತೆ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಆದರೆ, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧ್ಯವಾಗಿಲ್ಲ.

ಸತತ ಏಳು ಬಾರಿ ಈ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಅವರು ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ. ಈ ಬಾರಿಯೂ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಅವರನ್ನು ಸೋಲಿಸುವುದು ಸುಲಭದ ಮಾತಲ್ಲ ಎನ್ನುವುದು ಬಿಜೆಪಿ ನಾಯಕರಿಗೂ ಮನವರಿಕೆಯಾದಂತಿದೆ. ಹೊರಟ್ಟಿ ಅವರನ್ನೇ ಬಿಜೆಪಿಗೆ ಕರೆತಂದರೆ, ಈ ಕ್ಷೇತ್ರದಲ್ಲೂ ಸುಲಭವಾಗಿ ಗೆಲುವು ಸಾಧಿಸಬಹುದು ಎನ್ನುವುದು ಬಿಜೆಪಿ ನಾಯಕರ ಲೆಕ್ಕಾಚಾರ.

ವಯಸ್ಸಿನ ಅಡ್ಡಿ

ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ ನೀಡದಿರಲು ನಿರ್ಧರಿಸಲಾಗಿದೆ. ಅದೇ ಕಾರಣಕ್ಕೆ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಅಂತಹವರನ್ನು ದೂರ ಸರಿಸಲಾಗಿದೆ. ವಯೋಮಿತಿಯಿಂದ ವಿನಾಯ್ತಿ ಪಡೆದಿದ್ದ ಬಿ.ಎಸ್‌. ಯಡಿಯೂರಪ್ಪ ಅವರಿಂದಲೂ ಕೊನೆಗೆ ಅದೇ ಅಸ್ತ್ರ ಬಳಸಿ ರಾಜೀನಾಮೆ ಪಡೆಯಲಾಯಿತು ಎನ್ನುವ ಮಾತುಗಳು ಬಿಜೆಪಿಯಲ್ಲಿ ಕೇಳಿ ಬರುತ್ತಿವೆ.

ಸಭಾಪತಿ ಸ್ಥಾನದ ಮೇಲೆ ಕಣ್ಣು

ವಿಧಾನ ಪರಿಷತ್‌ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಅವರು ಆ ಸ್ಥಾನದಲ್ಲಿಯೇ ಮುಂದುವರಿಯಲು ಬಯಸಿದ್ದಾರೆ. ಈಗಾಗಲೇ ವಿಧಾನ ಪರಿಷತ್‌ನಲ್ಲಿ ಬಹುಮತದತ್ತ ದಾಪುಗಾಲಿಟ್ಟಿರುವ ಬಿಜೆಪಿ ಅವರನ್ನು ಯಾವುದೇ ಕ್ಷಣದಲ್ಲಿ ಕೆಳಕ್ಕಿಳಿಸಬಹುದು. ಬಿಜೆಪಿ ಸೇರ್ಪಡೆಯಾಗುವ ಮೂಲಕ ಆ ಸ್ಥಾನದಲ್ಲಿ ಮುಂದುವರೆಯುವ ಇಚ್ಛೆ ಹೊರಟ್ಟಿಯವರದ್ದಾಗಿದೆ.

ಬಿಜೆಪಿ ನಾಯಕರ ಬಳಿ ಸಭಾಪತಿಯಾಗಿ ಮುಂದುವರೆವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳುತ್ತವೆ. ಬಿಜೆಪಿ ರಾಜ್ಯ ನಾಯಕರಿಗೂ ಈ ಬಗ್ಗೆ ಆಕ್ಷೇಪವಿಲ್ಲ. ಆದರೆ, ವಯೋಮಿತಿಗೆ ಕಟ್ಟು ಬಿದ್ದಿರುವ ಹೈಕಮಾಂಡ್‌ ಹೊರಟ್ಟಿ ಅವರ ಸೇರ್ಪಡೆಗೆ ಗ್ರೀನ್‌ ಸಿಗ್ನಲ್‌ ತೋರಿಸುತ್ತಿಲ್ಲ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿರುವ ಕ್ಷೇತ್ರದಲ್ಲಿ ಸೋಲು ಎದುರಾದರೆ ಬೇರೆಯದ್ದೇ ಸಂದೇಶ ನೀಡಬಹುದು ಎನ್ನುವ ಲೆಕ್ಕಾಚಾರ ಇಲ್ಲಿನ ನಾಯಕರದ್ದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT