ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸೇರುತ್ತಿರುವ ದತ್ತ ಅವರನ್ನು ದೇವೇಗೌಡರು ಮಗನೆಂದು ನಂಬಿದ್ದರು: JDS

Last Updated 9 ಜನವರಿ 2023, 2:23 IST
ಅಕ್ಷರ ಗಾತ್ರ

ಬೆಂಗಳೂರು: 'ಜನವರಿ 15ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ' ಎಂದು ಜೆಡಿಎಸ್‌ನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದ್ದಾರೆ. ಇದರ ಬೆನ್ನಲ್ಲೇ ದತ್ತ ವಿರುದ್ಧ ಜೆಡಿಎಸ್‌ ಟೀಕಾ ಪ್ರಹಾರ ನಡೆಸಿದೆ.

ದತ್ತ ಕಾಂಗ್ರೆಸ್‌ ಸೇರ್ಪಡೆ ವಿಚಾರದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‌, 'ರಾಜ್ಯದ ಅಗ್ರಮಾನ್ಯ ನಾಯಕರು, ಮಾಜಿ ಪ್ರಧಾನಮಂತ್ರಿಗಳು ಆಗಿರುವ ಎಚ್‌.ಡಿ.ದೇವೇಗೌಡರ 'ಮಾನಸಪುತ್ರ' ಎಂದೇ ಖ್ಯಾತರಾಗಿರುವ ವೈಎಸ್‌ವಿ ದತ್ತ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಕೈ ಹಿಡಿಯಲು ಅವರು ದಿನವನ್ನೂ ನಿಗದಿ ಮಾಡಿಕೊಂಡಿದ್ದಾರೆ ಎನ್ನುವುದು ಸದ್ಯದ ಸುದ್ದಿ. ಬಹುತೇಕ ಕಡೆ ದೇವೇಗೌಡರ 'ಮಾನಸಪುತ್ರ' ಜೆಡಿಎಸ್ ತೊರೆದು ಹೋಗುತ್ತಿದ್ದಾರೆ ಎಂದು ಪ್ರಚಾರ ಮಾಡಲಾಗುತ್ತಿದೆ. 'ಮಾನಸಪುತ್ರ' ಎನ್ನುವ ಪದವೇ ಹೆಚ್ಚು ಸದ್ದು ಮಾಡುತ್ತಿದೆ. ದತ್ತ ಅವರು ಗೌಡರಿಗೆ ಮಾನಸಪುತ್ರ ಪುತ್ರರಾಗಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ ದೇವೇಗೌಡರು ಮಾತ್ರ ನಿಜಕ್ಕೂ ದತ್ತ ಅವರನ್ನು ಹೆತ್ತ ತಂದೆಗಿಂತ ಹೆಚ್ಚು ಸಲುಹಿದ್ದರು' ಎಂದು ಹೇಳಿದೆ.

ಮುಂದುವರಿದು, 'ಅಂತಹ ವೈಎಸ್‌ವಿ ದತ್ತ, ಮಾನಸಪುತ್ರನೆಂದು ಖ್ಯಾತಿಯ ಜತೆಗೆ ಸಕಲವನ್ನೂ ಸಂಪಾದನೆ ಮಾಡಿಕೊಂಡ ಮೇಲೆ ಸಲುಹಿದ, ಕಷ್ಟ ಬಂದಾಗ ಕಾಪಾಡಿದ, ಕಠಿಣ ಸಂದರ್ಭಗಳಲ್ಲಿ ಕಣ್ಣ ರೆಪ್ಪೆಯಂತೆ ಪೊರೆದ, ಅನೇಕ ಸಲ ಜನ್ಮಕೊಟ್ಟ ತಂದೆಗಿಂತ ಗಟ್ಟಿಯಾಗಿ ಜತೆಗೆ ನಿಂತು ಮುಳುಗೇ ಹೋಗುತ್ತಿದ್ದ ಬದುಕನ್ನು ಬದುಕಿಸಿಕೊಟ್ಟ 'ಮಾನಸ ತಂದೆ'ಯನ್ನು ಮರೆತು, ತೊರೆಯುತ್ತಿದ್ದಾರೆ' ಎಂದಿದೆ.

ಮತ್ತೊಂದು ಟ್ವೀಟ್‌ನಲ್ಲಿ, 'ಮಾನಸಪುತ್ರನನ್ನು ಇನ್ನೊಬ್ಬ ಪುತ್ರನೆಂದೇ ನಂಬಿದ್ದರು ದೇವೇಗೌಡರು. ನಂಬಿ ಪಕ್ಕದಲ್ಲಿ ಇಟ್ಟುಕೊಂಡರು. ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು. ಪ್ರೀತಿ, ವಿಶ್ವಾಸ ಎಲ್ಲವನ್ನೂ ಧಾರೆ ಎರೆದರು. ಆದರೆ ಇವತ್ತು ಮಾನಸಪುತ್ರ ಎಲ್ಲವನ್ನೂ ಮರೆತು ಕೃತಜ್ಞತಾಹೀನರಾಗಿ ಅದೇ ಗೌಡರಿಗೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ಸೇರುತ್ತಿದ್ದಾರೆ' ಎಂದು ಕಿಡಿಕಾರಿದೆ.

ಎಲ್ಲ ಕಾರ್ಯಕರ್ತರೂ ದೇವೇಗೌಡರ ಪಾಲಿಗೆ ಮಾನಸಪುತ್ರರಿದ್ದಂತೆಯೇ ಎಂದಿರುವ ಜೆಡಿಎಸ್‌, 'ಮಾನಸಪುತ್ರನಿಗೆ ನಂಬಿಕೆ ಎಂದರೆ ವ್ಯಾಪಾರ, ಪ್ರೀತಿ ಎಂದರೆ ಲಾಭದ ದಾರಿ, ವಿಶ್ವಾಸ ಎಂದರೆ ರಾಜಕೀಯ ಹಕೀಕತ್ತಿನ ರಾಜಮಾರ್ಗ. ಅಂಥ ಮಾನಸಪುತ್ರನ ಬಗ್ಗೆ ಗೌಡರು ಕೊರಗುವುದಿಲ್ಲ. ಏಕೆಂದರೆ, ಪಕ್ಷದ ಎಲ್ಲಾ ನಾಯಕರು, ಕಟ್ಟ ಕಡೆಯ ಕಾರ್ಯಕರ್ತನೂ ಮಾಜಿ ಪ್ರಧಾನಿಗಳ ಮಾನಸಪುತ್ರರೇ.. ಢೋಂಗಿ ಮಾನಸಪುತ್ರರನ್ನು ಮರೆಯುವುದು ಲೇಸು. ಅಲ್ಲವೇ?' ಎಂದಿದೆ.

ಕಡೂರು ತಾಲ್ಲೂಕಿನ ಯಗಟಿಯಲ್ಲಿ ಗುರುವಾರ (ಜನವರಿ 5ರಂದು) ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದ ದತ್ತ, ‘ಕಡೂರಿನಲ್ಲಿ ನಿರಂತರವಾಗಿ ಜನರ ಜೊತೆ ಸಂಪರ್ಕದಲ್ಲಿದ್ದೇನೆ. ಕಳೆದ ಒಂದೂವರೆ ವರ್ಷದಲ್ಲಿ ತಾಲ್ಲೂಕಿನಲ್ಲಿ ಹೋದೆಡೆಯೆಲ್ಲ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಬೇಕೆಂಬ ಸಾರ್ವತ್ರಿಕ ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಇಲ್ಲಿ ತುರ್ತಾದ, ಐತಿಹಾಸಿಕವಾದ ಹಾಗೂ ಅನಿವಾರ್ಯವಾದ ಬದಲಾವಣೆಯನ್ನು ಜನರು ಬಯಸಿದ್ದಾರೆ. ಜನಾಭಿಪ್ರಾಯ, ನನ್ನ ಜೊತೆಯಿರುವ ನನ್ನ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಒಟ್ಟಾರೆ ಅಭಿಪ್ರಾಯದಂತೆ ನನ್ನ ಸಮಾನ ಮನಸ್ಕ ಸ್ನೇಹಿತರಿರುವ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ತಾಗಿ ಸೇರುವ ನಿರ್ಧಾರ ಮಾಡಿದೆ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT