ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಫಾಯಿ ಕರ್ಮಚಾರಿ ಮೃತಪಟ್ಟರೆ ಕುಟುಂಬದ ಸದಸ್ಯರಿಗೆ ಉದ್ಯೋಗ

Last Updated 27 ಆಗಸ್ಟ್ 2020, 16:20 IST
ಅಕ್ಷರ ಗಾತ್ರ

ಬೆಂಗಳೂರು: ಸಫಾಯಿ ಕರ್ಮಚಾರಿಗಳು (ಮ್ಯಾನ್ಯುಯಲ್ ಸ್ಕ್ಯಾವೆಂಜರ್) ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟರೆ ಅವರ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಸಂಬಂಧ ಅಗತ್ಯ ಕ್ರಮ ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಗುರುವಾರ ಸೂಚನೆ ನೀಡಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್‌ವಸತಿ ಕಾಯ್ದೆ2013 ರ 3 ನೇ ರಾಜ್ಯ ಮಟ್ಟದ ಮೇಲ್ವಿಚಾರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾರಜೋಳ, ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸೂಕ್ತ ಸಲಹೆಗಳನ್ನು ನೀಡಬೇಕು ಎಂದೂ ಹೇಳಿದರು.

ಈ ಕಾಯ್ದೆಯನ್ವಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ 30,034 ಶೌಚಾಲಯಗಳನ್ನು ನೈರ್ಮಲ್ಯ ಶೌಚಾಲಯಗಳನ್ನಾಗಿ ಪರಿವರ್ತಿಸಲಾಗಿದೆ. ರಾಜ್ಯದಲ್ಲಿ ಸಫಾಯಿ ಕರ್ಮಚಾರಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಈ ನಿಗಮದ ಮೂಲಕ 3,210 ಸಫಾಯಿ ಕರ್ಮಚಾರಿಗಳನ್ನು ಗುರುತಿಸಿ ಪುನರ್‌ವಸತಿ ಕಲ್ಪಿಸಬೇಕು ಎಂದು ಕಾರಜೋಳ ನಿರ್ದೇಶನ ನೀಡಿದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಶೇ 5 ರಷ್ಟು ಸೀಟುಗಳನ್ನು ಮೀಸಲಿಟ್ಟು, ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್‌ ಸ್ಕ್ಯಾವೆಂಜರ್‌ಗಳ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರವಾಗಿ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಎಸ್‌ಸಿಪಿ ಟಿಎಸ್‌ಪಿ ಯೋಜನೆಯ ಸಲಹೆಗಾರರಾದ ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರವಿಕುಮಾರ್‌ ಸುರಪುರ್‌, ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಜಗದೀಶ್‌ ಹಿರೇಮನಿ ಮುಂತಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT