ಸೋಮವಾರ, ಸೆಪ್ಟೆಂಬರ್ 20, 2021
28 °C

ತೃತೀಯ ಲಿಂಗಿಗಳ ಮೀಸಲಾತಿ ವಿಸ್ತರಿಸಲು ಹೈಕೋರ್ಟ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಾಗರಿಕ ಸೇವಾ ನಿಯಮಗಳಿಗೆ ತಿದ್ದುಪಡಿ ತರುವ ಮೂಲಕ ತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಕಲ್ಪಿಸಿರುವ ಶೇ 1ರಷ್ಟು ಮೀಸಲಾತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೂ ವಿಸ್ತರಿಸುವುದು ಸೂಕ್ತ’ ಎಂದು ಹೈಕೋರ್ಟ್ ಪ್ರತಿಪಾದಿಸಿದೆ.

ತೃತೀಯ ಲಿಂಗಿ ಸಮುದಾಯದ ಪರ ಕೆಲಸ ಮಾಡುತ್ತಿರುವ ‘ಸಂಗಮ’ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಸೂಚನೆ ನೀಡಿದೆ.

‘ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡಲು ಸರ್ಕಾರ ಕೈಗೊಂಡಿರುವ ಕ್ರಮ ಶ್ಲಾಘನೀಯ. ಈ ನಿಯಮ ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮ ಮತ್ತು ಸಂಸ್ಥೆಗಳಲ್ಲೂ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸರ್ಕಾರ ನಿರ್ದೇಶನ ನೀಡಬೇಕಾಗುತ್ತದೆ’ ಎಂದು ಹೇಳಿತು.

ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ 6 ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಸೆ.22ಕ್ಕೆ ಮುಂದೂಡಿತು.

‘ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಪಡೆಯುವುದು ತೃತೀಯ ಲಿಂಗಿಗಳ ಮೂಲಭೂತ ಹಕ್ಕು’ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದನ್ನು ಉಲ್ಲಂಘಿಸಿ ಪೊಲೀಸ್ ಇಲಾಖೆ 2,467 ಸಿಬ್ಬಂದಿ ನೇಮಕಕ್ಕೆ ಮುಂದಾಗಿದೆ. ಪುರುಷ ಮತ್ತು ಮಹಿಳೆಯರಿಗಷ್ಟೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ’ ಎಂದು ಆರೋಪಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು