ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್‌ನಲ್ಲಿ ಕೋವಿಡ್ ನಿಗಾಕ್ಕೆ ಜಂಟಿ ತಂಡ:’ ಬಿ.ಸಿ. ನಾಗೇಶ್‌

Last Updated 9 ಡಿಸೆಂಬರ್ 2021, 19:38 IST
ಅಕ್ಷರ ಗಾತ್ರ

ಬೆಂಗಳೂರು: ವಸತಿ ಶಾಲೆಗಳು, ಹಾಸ್ಟೆಲ್‌ಗಳಲ್ಲಿ ಕೋವಿಡ್‌ ನಿಯಂತ್ರಣ ಮಾರ್ಗಸೂಚಿ ಅನುಷ್ಠಾನ ಕುರಿತು ನಿಗಾ ವಹಿಸಲು ತಾಲ್ಲೂಕು ಮಟ್ಟದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜಂಟಿ ಸಮಿತಿ ರಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಈಗ ಯಾವುದೇ ಶಾಲೆಗಳಲ್ಲಿ ಕೋವಿಡ್‌ ಸೋಂಕು ಕಂಡುಬಂದಿಲ್ಲ. ವಸತಿ ಶಾಲೆ ಮತ್ತು ಹಾಸ್ಟೆಲ್‌ಗಳಲ್ಲಿ ಮಾತ್ರ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಈ ಎರಡೂ ಸಂಸ್ಥೆಗಳ ಮೇಲೆ ಹೆಚ್ಚಿನ ನಿಗಾ ಇರಿಸಲು ಜಂಟಿ ತಂಡಗಳ ರಚನೆಗೆ ಸೂಚನೆ ನೀಡಲಾಗಿದೆ’ ಎಂದರು.

ವಸತಿ ಶಾಲೆ ಮತ್ತು ಹಾಸ್ಟೆಲ್‌ಗಳಲ್ಲಿ ಊಟ ಮಾಡುವಾಗ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ವಿದ್ಯಾರ್ಥಿಗಳು ತೀರಾ ಹತ್ತಿರದಲ್ಲಿ ಮಲಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಆದರೆ, ಯಾವುದೇ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿಲ್ಲ ಎಂದು ತಿಳಿಸಿದರು.

ಎರಡು ದಿನಗಳಲ್ಲಿ ಒಂದರಿಂದ ಹತ್ತನೇ ತಗರತಿ ವಿದ್ಯಾರ್ಥಿಗಳಲ್ಲಿ ಎಲ್ಲಿಯೂ ಕೋವಿಡ್‌ ಸೋಂಕು ಕಂಡುಬಂದಿಲ್ಲ. ಪದವಿಪೂರ್ವ ಕಾಲೇಜಿನಲ್ಲಿ ಮಾತ್ರ ಪ್ರಕರಣಗಳು ಪತ್ತೆಯಾಗಿವೆ. ಈಗಾಗಲೇ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿ 172 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿತ್ತು. 100 ಮಂದಿ ಗುಣಮುಖರಾಗಿದ್ದಾರೆ ಎಂದರು.

ಶಾಲೆಗಳನ್ನು ಮುಚ್ಚುವ ಪ್ರಸ್ತಾವವೇ ಇಲ್ಲ. ಹೊಸ ಮಾರ್ಗಸೂಚಿಯನ್ನೂ ನೀಡುವುದಿಲ್ಲ. ಈಗ ಇರುವ ಮಾರ್ಗಸೂಚಿಯೇ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದರು.

ಕಡ್ಡಾಯ ಇಲ್ಲ: ಶಾಲಾ ವಿದ್ಯಾರ್ಥಿಗಳ ಪೋಷಕರು ಎರಡು ಡೋಸ್‌ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಸಿಲ್ಲ. ಆ ರೀತಿ ಕಾನೂನಿನಲ್ಲಿ ಅವಕಾಶವಿಲ್ಲ. ಎರಡು ಡೋಸ್‌ ಲಸಿಕೆ ಪಡೆಯುವಂತೆ ಎಲ್ಲರಿಗೂ ಮನವೊಲಿಕೆ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT